ಬೆಂಗಳೂರು : ಕಳೆದ ವರ್ಷದ ಸುರಿದ ಮಳೆಯಿಂದ ಉಂಟಾದ ಹಾನಿಗೆ ಪರಿಹಾರ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಚಿವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಚಿವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿರುವ ಸಿದ್ದರಾಮಯ್ಯ ಡಿಸಿಎಂ ಗೋವಿಂದ ಕಾರಜೋಳ, ಸಚಿವರಾದ ವಿ. ಸೋಮಣ್ಣ, ಸುರೇಶ್ ಕುಮಾರ್, ಶಶಿಕಲಾ ಜೊಲ್ಲೆ ಅವರಿಗೆ ಟ್ವೀಟ್ ಮೂಲಕ ಪ್ರಶ್ನೆಗಳನ್ನು ಹಾಕಿದ್ದಾರೆ.
• ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ಥಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ? ಎಂದು ಪ್ರಶ್ನಿಸಿದ್ದಾರೆ.
• ಸಚಿವ ಶ್ರೀ ವಿ ಸೋಮಣ್ಣ ಅವರಿಗೆ ಪ್ರಶ್ನೆ ಮಾಡಿರುವ ಅವರು, ಕಳೆದ ವರ್ಷದ ಅತೀವೃಷ್ಠಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‍ನಲ್ಲಿವೆ? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಎಂದು ಪ್ರಶ್ನಿಸಿದ್ದಾರೆ.
• ಸಚಿವ ಸುರೇಶ್ ಕುಮಾರ್ ಅವರಿಗೆ ಪ್ರಶ್ನೆ ಮಾಡಿರುವ ಅವರು, ಕಳೆದ ವರ್ಷದ ಅತೀವೃಷ್ಠಿಯ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ಥಿಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಕೊಳ್ಳಲಾಗಿದೆ? ದುರಸ್ಥಿಗೆ ಬಾಕಿ ಉಳಿದಿರುವುದು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಎಂದು ಪ್ರಶ್ನಿಸಿದ್ದಾರೆ.
• ಶಶಿಕಲಾ ಜೊಲ್ಲೆ ಅವರಿಗೆ ಪ್ರಶ್ನೆ ಮಾಡಿರುವ ಅವರು, ಕಳೆದ ವರ್ಷದ ಅತೀವೃಷ್ಠಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ಥಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ಥಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು? ದಯವಿಟ್ಟು ವಿವರ ನೀಡುವಿರಾ? ಎಂದು ಸಚಿವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.










