ಕಾಬೂಲ್ : ಅಫ್ಘಾನಿಸ್ತಾನದ ಪೂರ್ವ ಪಕ್ಟಿಕಾ ಪ್ರಾಂತ್ಯದಲ್ಲಿ ಸಂಭವಿಸಿದ ಭೂಕಂಪದಲ್ಲಿ ಕನಿಷ್ಠ 1000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.1ರಷ್ಟಿತ್ತು. ಹೆಲಿಕಾಪ್ಟರ್ ಗಳ ಮೂಲಕ ರಕ್ಷಣಾ ಪಡೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. 90ಕ್ಕೂ ಹೆಚ್ಚು ಮನೆಗಳು ಧ್ವಂಸಗೊಂಡಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಫ್ಘಾನಿಸ್ತಾನದ ಖೋಸ್ಟ್ ನಗರದಿಂದ 44 ಕಿಲೋಮೀಟರ್ ದೂರದಲ್ಲಿ 51 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದೆಡೆ ಪಾಕಿಸ್ತಾನದಲ್ಲೂ ಹಲವೆಡೆ ಭೂಮಿ ಕಂಪಿಸಿದೆ. ಆದರೆ ಇದುವರೆಗೂ ಸಾವು- ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.










