ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಕೆ.ಆರ್. ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾ. ವಿ.ಶ್ರೀಕಾಂತ್ ಅವರು ಈ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜುಲೈ 6ಕ್ಕೆ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸೂಚನೆ ನೀಡಿದ್ದಾರೆ.
ಇಂದು ಅಜಿತ್ ರೈ ಯನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದು, 10 ದಿನಕ್ಕೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ ಸಲ್ಲಿಸಿದ್ದರು. ಆದರೆ 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಅಜಿತ್ ರೈ ಪುತ್ತೂರಿನಲ್ಲೂ ಆಸ್ತಿ ಮಾಡಿದ್ದು, ಸ್ವತಃ ಊರಿಗೆ ಕರೆದುಕೊಂಡು ಹೋಗಿ ತನಿಖೆ ನಡೆಸಲು ಪೊಲೀಸರಿಗೆ ನ್ಯಾಯಾಲಯ ಅವಕಾಶ ನೀಡಿದೆ.
ಭ್ರಷ್ಟಾಚಾರ ಆರೋಪದಡಿ ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಅಜಿತ್ ರೈ ಮನೆ ಮೇಲೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಸಹಕಾರನಗರದ ನಿವಾಸ ಸೇರಿ 12 ಕಡೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದರು.
ನಗರದ ಕೆ.ಆರ್.ಪುರಂ ತಹಶೀಲ್ದಾರ್ ಅಜಿತ್ ರೈ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 40 ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ವಿವಿಧ ಅಕ್ರಮ ಆಸ್ತಿಗಳನ್ನು ಪತ್ತೆ ಹಚ್ಚಿದ್ದರು. ಅಜಿತ್ ರೈಗೆ ಸೇರಿದ 100 ಎಕರೆಗೂ ಅಧಿಕ ವಿವಿಧ ಆಸ್ತಿ ಪತ್ರಗಳು, ದೇಶ-ವಿದೇಶಿ ಬ್ರ್ಯಾಂಡ್ನ ಮದ್ಯ ಪತ್ತೆಯಾಗಿತ್ತು. ಸತತ 30 ಗಂಟೆಗಳ ಪರಿಶೀಲನೆ ವೇಳೆ ಅಕ್ರಮ ಆಸ್ತಿ ಗಳಿಕೆ ಮಾಡಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಜಿತ್ ರೈನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.










