ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಗಣ್ಯರ ಸಂತಾಪ…

85
firstsuddi

ಬೆಂಗಳೂರು : ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡೀಸ್ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಆಸ್ಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.

ಆಸ್ಕರ್ ಫರ್ನಾಂಡಿಸ್ ನನಗೆ ಗುರು, ಮಾರ್ಗದರ್ಶಕರಾಗಿದ್ದರು. ನಮ್ಮ ಪಕ್ಷದ ಅನೇಕ ನಾಯಕರಿಗೆ ಅವರು ಮಾರ್ಗದರ್ಶಕರಾಗಿದ್ದರು. ಅವರನ್ನು ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅವರು ನೀಡಿದ ಸೇವೆಯನ್ನು ನಾವು ಸದಾ ಸ್ಮರಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ, ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಮಾಜಿ ಕೇಂದ್ರ ಸಚಿವರು, ಕಾಂಗ್ರೆಸ್ ಹಿರಿಯ ಮುಖಂಡರಾದ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ಬೇಸರವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬದವರು ಹಾಗೂ ನಾಡಿನಾದ್ಯಂತ ಇರುವ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದು, ಆಸ್ಕರ್ ಫರ್ನಾಂಡಿಸ್ ಒಬ್ಬ ಧೀಮಂತ ನಾಯಕನಾಗಿದ್ದರು. ಕಾಂಗ್ರೆಸ್ ಪಕ್ಷ ಕಷ್ಟದಲ್ಲಿದ್ದಾಗ 2 ಬಾರಿ ಅಧ್ಯಕ್ಷರಾಗಿದ್ದರು. ಗಾಂಧಿ ತತ್ವಕ್ಕೆ ಆಸ್ಕರ್ ಫರ್ನಾಂಡಿಸ್ ಹೇಳಿ ಮಾಡಿಸಿದ ವ್ಯಕ್ತಿತ್ವ ಎಂದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಂತಾಪ ಸೂಚಿಸಿದ್ದು, ರಾಜ್ಯಸಭಾ ಸದಸ್ಯರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಆಸ್ಕರ್ ಫರ್ನಾಂಡಿಸ್ ರವರು ಇಂದು ನಮ್ಮನ್ನೆಲ್ಲ ಅಗಲಿರುವುದು ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರ ಶಾಂತಿ ಸಿಗಲೆಂದು ಕೋರುತ್ತೇನೆ. ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬ ವರ್ಗಕ್ಕೆ ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು, ಸರಳ ಸಜ್ಜನ ನಾಯಕರಾಗಿ ಗುರುತಿಸಿಕೊಂಡಿದ್ದರು. ದೇವರು ಅವರಿಗೆ ಸದ್ಗತಿ ನೀಡಲಿ, ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ಸರಳ, ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಕಾರ್ಯಕರ್ತರ ನಾಯಕರಾಗಿದ್ದರು. ಆಸ್ಕರ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಆಸ್ಕರ್ ಫರ್ನಾಂಡಿಸ್ ನಿಧನದ ಹಿನ್ನೆಲೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ನಮ್ಮ ನಾಡಿನ ಹಿರಿಯ ರಾಜಕಾರಣಿ, ಕೇಂದ್ರದ ಮಾಜಿ ಸಚಿವರು, ನನ್ನ ಆಪ್ತರೂ ಆಗಿದ್ದ ಆಸ್ಕರ್ ಫರ್ನಾಂಡಿಸ್ ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೇನು ಗುಣಮುಖರಾಗಿ ಮನೆಗೆ ಮರಳುತ್ತಾರೆ ಎನ್ನುವ ಹೊತ್ತಿನಲ್ಲಿ ಈ ಆಘಾತದ ಸುದ್ದಿ ಬಂದಿದೆ. ಅವರು ಐದು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ್ದರು. ಕೇಂದ್ರ ಸರಕಾರ ಮತ್ತು ರಾಜ್ಯದ ಕೊಂಡಿಯಾಗಿದ್ದರು. ರಾಜ್ಯಕ್ಕಾಗಿ ಅನೇಕ ಕೆಲಸಗಳನ್ನು ಮಾಡಿದ್ದರಲ್ಲದೆ, ಪಕ್ಷ ವಹಿಸಿದ ಎಲ್ಲ ಜವಾಬ್ದಾರಿಗಳನ್ನು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ನಿಭಾಯಿಸಿದ್ದರು ಎಂದಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಕೂಡ ಸಂತಾಪ ಸೂಚಿಸಿದ್ದು, ಕರಾವಳಿ ಭಾಗಕ್ಕೆ ಆಸ್ಕರ್ ಫರ್ನಾಂಡಿಸ್ ಕೊಡುಗೆ ಅಪಾರ. ಆಸ್ಕರ್ ಫರ್ನಾಂಡಿಸ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದಿದ್ದಾರೆ.