ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ; ಹಿಜಾಬ್​ಗೆ ನಿಷೇಧ…

44
firstsuddi

ಬೆಂಗಳೂರು : ಇಂದಿನಿಂದ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 29ರವರೆಗೆ ನಡೆಯಲಿದೆ. ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎಲ್ಲ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು ಇರಲಿದೆ.

ರಾಜ್ಯದ 1,109 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,716 ಕಾಲೇಜುಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಈ ಬಾರಿ 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದು, ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಕೇಂದ್ರಕ್ಕೆ 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತದಳ, 525 ತಾಲೂಕು ಜಾಗೃತ ದಳ ಹಾಗೂ 2,373 ವಿಶೇಷ ಜಾಗೃತದಳ ನಿಯೋಜನೆ ಮಾಡಲಾಗಿದೆ.

ಮಾರ್ಚ್ 9ರಿಂದ ಮಾರ್ಚ್ 29ರವರೆಗಿನ ದ್ವಿತೀಯ ಪಿಯುಸಿ ಪರೀಕ್ಷೆಯ ದಿನಾಂಕಗಳಲ್ಲಿ, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವ ಮೂಲಕ ಉಚಿತವಾಗಿ ಪ್ರಯಾಣ ಮಾಡಬಹುದು.

ಈಗಾಗಲೇ ಸರ್ಕಾರದ ನಿರ್ಧಾರದಂತೆ ಪರೀಕ್ಷೆಗೆ ಬರುವವರಿಗೆ ವಸ್ತ್ರ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಕೊಠಡಿಯೊಳಗೆ ಬರುವಂತಿಲ್ಲ ಎಂದು ತಿಳಿಸಲಾಗಿದೆ. ಕಳೆದ ವರ್ಷದ ನಿಯಮವೇ ಈ ಬಾರಿಯೂ ಜಾರಿಯಲ್ಲಿರಲಿದೆ.