ಇಂದಿನಿಂದ ರಾಜ್ಯಾದ್ಯಂತ ಪಿಯು, ಪದವಿ ಕಾಲೇಜು ಪುನಾರಂಭ…

61
firstsuddi

ಬೆಂಗಳೂರು : ಹಿಜಾಬ್ ವಿವಾದದ ನಡುವೆಯೂ ಇಂದಿನಿಂದ ರಾಜ್ಯಾದ್ಯಂತ ಪಿಯು ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದೆ.

ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಹೊತ್ತಿಕೊಂಡ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯದ ಇತರೆಡೆಗೂ ಹಬ್ಬಿತ್ತು. ಹಿಜಾಬ್ ಜ್ವಾಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಕೆಂಡವಾಗಿದ್ವು, ಫೆ. 8 ರಂದು ಇಡೀ ಕಾಲೇಜ್ ಆವರಣವೇ ರಣಾಂಗಣವಾಗಿತ್ತು. ಈ ಹಿನ್ನಲೆಯಲ್ಲಿ ಸರ್ಕಾರ ಫೆಬ್ರವರಿ 9ರಿಂದ 15ರ ವರೆಗೆ ಕಾಲೇಜುಗಳಿಗೆ ರಜೆ ಘೋಷಿಸಿತ್ತು. ಇದೀಗ ಒಂದು ವಾರದ ಬಳಿಕ ಕಾಲೇಜಿನ ಬಾಗಿಲು ತೆರೆಯುತ್ತಿವೆ.

ನಿನ್ನೆ ಮಧ್ಯಂತರ ಆದೇಶ ಹೊರಡಿಸಿದ್ದ ಹೈಕೋರ್ಟ್’ನ ತ್ರಿಸದಸ್ಯ ಪೀಠ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಸಂಕೇತ ಬಳಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದು, ಆದೇಶ ಉಲ್ಲಂಘನೆಯಾಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ‌ ನಗರದ ಆಯಾ ವಲಯಗಳಲ್ಲಿರುವ ಕಾಲೇಜುಗಳ ಮುಂದೆ ಶಾಂತಿ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಡಿಪಿಪಿಗಳಿಗೆ ನಿರ್ದೇಶನ‌ ನೀಡಿದ್ದಾರೆ.

ಕಮಿಷನರ್ ನಿರ್ದೇಶನ ಹಿನ್ನೆಲೆಯಲ್ಲಿ‌ ತಮ್ಮ ವ್ಯಾಪ್ತಿಯಲ್ಲಿರುವ ಕಾಲೇಜು‌ ಆಡಳಿತ ಮಂಡಳಿಯವರ ಜತೆ ಸ್ಥಳೀಯ ಪೊಲೀಸರು ಸಭೆ ನಡೆಸಿದ್ದಾರೆ. ಶೈಕ್ಷಣಿಕ ಸಂಸ್ಥೆಗಳ ಮುಂದೆ 144 ಸೆಕ್ಷನ್ ಜಾರಿಯಲ್ಲಿದ್ದು, ಕಾಲೇಜು ಸುತ್ತಲಿನ 200 ಮೀಟರ್ ವ್ಯಾಪ್ತಿಯವರೆಗೂ ನಾಲ್ಕು ಜನಕ್ಕಿಂತ ಹೆಚ್ಚಿರದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಗಿದೆ.

ತರಗತಿ ಅವಧಿಯಲ್ಲಿ ಕಾಲೇಜುಗಳ ಮುಂದೆ ಅಗತ್ಯಗನುಣವಾಗಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಬರುವ ಕಾಲೇಜುಗಳ‌ ಮುಂದೆ ಪೊಲೀಸರು ಬ್ಯಾರಿಕೇಡ್ ಹಾಕಲಾಗಿದೆ. ವದಂತಿಗಳಿಗೆ ಕಿವಿಗೊಡದಂತೆ ವಿದ್ಯಾರ್ಥಿಗಳಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ್ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೊಂದಿಗೆ ಪರಿಶೀಲನಾ ಸಭೆಯನ್ನೂ ನಡೆಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್ ಅವರು, ಪರಿಸ್ಥಿತಿಯನ್ನು ಪರಿಶೀಲನೆ ನಡೆಸಲಾಗಿದ್ದು, ಈ ಹಿನ್ನೆಲೆಯಲ್ಲಿ ಪಿಯು ಹಾಗೂ ಪದವಿ ಕಾಲೇಜುಗಳನ್ನು ಹೈಕೋರ್ಟ್ ನಿರ್ದೇಶನದಂತೆ ಪುನರಾರಂಭಿಸಲು ನಿರ್ಧರಿಸಲಾಗಿದೆ. ಸಮವಸ್ತ್ರ ಇರುವ ಕಡೆ ನಿಯಮ ಪಾಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.