ಬೆಂಗಳೂರು : ಇಂದು ಅಥವಾ ನಾಳೆಯೊಳಗೆ ಕೇಂದ್ರ ಸರ್ಕಾರ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾದ ಪ್ರವಾಹದ ವಿಚಾರವಾಗಿ ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಅವರ ಬಳಿ ಈಗಾ ತಾನೇ ಚರ್ಚೆ ಮಾಡಿದ್ದೇನೆ. ಕಳೆದ ತಿಂಗಳು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಪ್ರವಾಹ ಉಂಟಾಗಿ ಅಪಾರ ಪ್ರಮಾಣದ ಹಾನಿ ಸಂಭವಿಸಿತ್ತು. ನಾಲ್ಕೈದು ರಾಜ್ಯಗಳಿಗೆ ಒಂದೇ ಹಂತದಲ್ಲಿ ಪರಿಹಾರ ಬಿಡುಗಡೆಯಾಗಲಿದ್ದು, ಕರ್ನಾಟಕ ಸೇರಿದಂತೆ ನಾಲ್ಕೈದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಇಂದು ಅಥವಾ ನಾಳೆಯೊಳಗೆ ಪರಿಹಾರ ಹಣವನ್ನು ಬಿಡುಗಡೆ ಮಾಡಲಿದೆ. ಇದರಿಂದಾಗಿ ಸಂತ್ರಸ್ಥರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಚುನಾವಣೆಯನ್ನು ಘೋಷಣೆ ಮಾಡಿರುವ ವಿಷಯಕ್ಕೆ ಸಂಬಂದಿಸಿದಂತೆ ಪ್ರತಿಕ್ರಯಿಸಿದ ಅವರು, ನಾವೆಲ್ಲಾ ಯಾವ ಸಂದರ್ಭದಲ್ಲಾದರೂ ಎಲ್ಲರೂ ಒಟ್ಟಾಗಿ ಚುನಾವಣೆಯನ್ನು ಎದುರಿಸಲು ಸಿದ್ದರಿದ್ದೇವೆ. ಪಕ್ಷದಲ್ಲಿ ಯಾವುದೇ ರೀತಿಯ ಸಮಸ್ಯೆಗಳಿಲ್ಲ. ಸಣ್ಣ ಪುಟ್ಟ ಸಮಸ್ಯೆಗಳಿದ್ದರೂ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಪ್ರಯತ್ನಿಸುತ್ತೇವೆ ಎಂದು ಹೇಳಿದ್ದು, ಬಳಿಕ ಬಳ್ಳಾರಿ ಜಿಲ್ಲೆಯನ್ನು ವಿಭಜನೆ ಮಾಡುವ ಕುರಿತು ಮಾತನಾಡಿದ್ದು, ಅಭಿವೃದ್ದಿ ದೃಷ್ಟಿಯಿಂದ ಜಿಲ್ಲೆಯನ್ನು ವಿಭಜನೆ ಮಾಡಬೇಕೆಂಬ ಬೇಡಿಕೆ ಬಂದಿದೆ. ಕೆಲವರು ಜಿಲ್ಲೆಯನ್ನು ವಿಭಜನೆ ಮಾಡುವುದು ಸರಿಯಲ್ಲ ಎಂದು ಹೇಳುತ್ತಿದ್ದಾರೆ. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.










