ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ : ಅಭಿಮಾನಿಗಳಿಗೆ ಗೋಲ್ಡನ್ ಸ್ಟಾರ್ ಪತ್ರ…

112
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬ ಜುಲೈ 2 ರಂದು ಇದ್ದು, ಪ್ರತಿವರ್ಷ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬವನ್ನು ಬಹಳ ಅದ್ದೂರಿಯಾಗಿ ಅಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾದಿಂದಾಗಿ ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಗೆ ಬ್ರೇಕ್ ಹಾಕಿದ್ದು, ಪತ್ರದ ಮೂಲಕ ಅಭಿಮಾನಿಗಳಿಗೆ ಈ ವರ್ಷ ಹುಟ್ಟು ಹಬ್ಬ ಆಚರಿಸುತ್ತಿಲ್ಲ ಎಂದು ಮನವಿ ಮಾಡಿದ್ದಾರೆ.

ಪ್ರತಿ ವರ್ಷವೂ ನನ್ನ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಆಶೀರ್ವದಿಸುತ್ತಾ ಬಂದಿರುವಿರಿ. ಆದರೆ ಈ ವರ್ಷ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಸಿಲುಕಿ ನನ್ನ ಹಲವು ಸಿನಿಮಾ ಸಹೋದ್ಯೋಗಿಗಳು, ಆತ್ಮೀಯರು, ಗೆಳೆಯರು ಬಲಿಯಾದದ್ದು ನೋವು ತರಿಸಿದೆ. ಅದೆಷ್ಟೋ ಜನರ ಜೀವನ ನಲುಗಿ ಹೋಗಿದೆ. ಇಷ್ಟೆಲ್ಲ ನೋವುಗಳ ನಡುವೆ ಸಂಭ್ರಮಕ್ಕಿದು ಸರಿಹೊಂದುವ ಸಮಯವಲ್ಲವೆಂದಿನಿಸಿ ಈ ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳದಿರಲು ಇಚ್ಛಿಸಿರುತ್ತೇನೆ. ಅಲ್ಲದೇ ಜನ್ಮದಿನದಂದು ನಾನು ಹೊರಾಂಗಣ ಚಿತ್ರೀಕರಣದಲ್ಲಿ ತೊಡಗಿರುತ್ತೇನೆ. ಪ್ರತಿ ವರ್ಷವೂ ಪ್ರೀತಿಯಿಂದ ಹುಟ್ಟುಹಬ್ಬ ಆಚರಣೆಗೆ ನೀವುಗಳು ಪ್ರೀತಿಯಿಂದ ತರುವ ಕೇಕ್, ಹಾರ, ಉಡುಗೊರೆ ಮುಂತಾದವುಗಳಿಗಾಗಿ ಈ ವರ್ಷ ಹಣ ವ್ಯಯಿಸದೆ, ಅದೇ ಖರ್ಚಿನ ಮೊತ್ತವನ್ನು ಕೊರೊನಾ ಸಂಕಷ್ಟದಲ್ಲಿರುವ ಮತ್ತಷ್ಟು ಜೀವಗಳಿಗೆ ಸಹಾಯ ಮಾಡಿ ಎಂದು ಕೇಳಿಕೊಳ್ಳುತ್ತೇನೆ. ಅದೇ ನನಗೆ ಶ್ರೀರಕ್ಷೆ ಎಂದು ಗಣೇಶ್ ಅವರು ಪತ್ರದಲ್ಲಿ ಬರೆದಿದ್ದಾರೆ.

ಸದ್ಯ ಗಣೇಶ್ ಅವರು ಗಾಳಿಪಟ-2 ಸಿನಿಮಾದಲ್ಲಿ ಬ್ಯೂಸಿಯಾಗಿದ್ದು, ಈ ಚಿತ್ರಕ್ಕೆ ನಿರ್ದೇಶಕ ಯೋಗರಾಜ್ ಭಟ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಅಲ್ಲದೇ ಗೋಲ್ಡನ್ ಸ್ಟಾರ್ ಗಣೇಶ್ ಅವರು ಸಾಕಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಕೊರೊನಾ ಲಾಕ್ ಡೌನ್ ಮುಗಿದ ನಂತರ ಒಂದೊಂದೇ ಸಿನಿಮಾಗಳು ತೆರೆ ಮೇಲೆ ಬರಲಿವೆ.