ಉಡುಪಿ ವೀಡಿಯೋ ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ.

62
firstsuddi

ಮಂಗಳೂರು: ಉಡುಪಿ ಕಾಲೇಜೊಂದರಲ್ಲಿ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಎಫ್ಐಆರ್ ಆಗಿದೆ. ತನಿಖೆಯನ್ನು ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ಮಾಡುತ್ತಿದ್ದು, ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉಡುಪಿ ಜಿಲ್ಲೆ ಪ್ರವಾಸ ನಡೆಸಲಿರುವ ಸಿಎಂ ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮೆರಾ ಇರಲಿಲ್ಲ ಎಂದು ಹೇಳಿದ್ದಾರೆ. ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದರು.

ಗೃಹ ಸಚಿವರು ಈ ಪ್ರಕರಣವನ್ನು ಮಕ್ಕಳಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮಕ್ಕಳಾಟಿಕೆಯಾಗಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ? ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದು ಅವರು ಹೇಳಿರಬಹುದು. ಆದರೆ ಪ್ರಕರಣ ದಾಖಲಾಗಿದ್ದು, ಎಫ್ಐಆರ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಡಿವೈಎಸ್‌ಪಿ ಮಟ್ಟದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಕರಣವನ್ನು ಎಸ್ಐಟಿಗೆ ವಹಿಸುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರಾವಳಿ ಭಾಗಕ್ಕೆ ನೀಡಿರುವ ಸೌಲಭ್ಯಗಳನ್ನು ಬಜೆಟ್‌ನಲ್ಲಿ ತಿಳಿಸಲಾಗಿದೆ. ಜುಲೈ ತಿಂಗಳಲ್ಲಿ ಉಡುಪಿ, ಮಂಗಳೂರು, ಕರಾವಳಿ ಪ್ರದೇಶದಲ್ಲಿ ಮಳೆಯಾಗಿದ್ದು, ಹಾನಿಯಾಗಿರುವ ಪ್ರದೇಶಗಳನ್ನು ವೀಕ್ಷಿಸಲು ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಲು ಆಗಮಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.