ಒಳಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ ; ಬಿಎಸ್‍ವೈ ಮನೆ ಮೇಲೆ ಕಲ್ಲು ತೂರಾಟ…

56
firstsuddi

ಶಿವಮೊಗ್ಗ : ಒಳಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಬಂಜಾರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದೆ.

ರಾಜ್ಯ ಸರ್ಕಾರ ಕಳೆದ ಎರಡು ದಿನಗಳ ಹಿಂದೆ ಮೀಸಲಾತಿ ಪ್ರಕಟ ಮಾಡಿದ್ದು, ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಸದಾಶಿವ ಆಯೋಗದ ವರದಿಯಿಂದ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಲಿದೆ. ಹೀಗಾಗಿ ಈ ವರದಿ ಜಾರಿಗೊಳಿಸದಂತೆ ಆಗ್ರಹಿಸಿ ನಗರದ ಮಾಳರಕೇರಿ ಬಡಾವಣೆಯಲ್ಲಿನ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ಸಂಸದ ಬಿ.ವೈ ರಾಘವೇಂದ್ರ ಭಾವಚಿತ್ರಕ್ಕೆ ಬೆಂಕಿ ಹಾಕಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹಲ್ಲೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಶಿಕಾರಿಪುರದಲ್ಲಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.