ಬೆಂಗಳೂರು: ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.
ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ 50 ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ನಗರದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಉತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರಿ ಶಾಲೆಗಳಿಗೆ ಉಚಿತ ಘೋಷಣೆಯ ಉಡುಗೊರೆ ನೀಡಿದರು.
ಉಚಿತ ವಿದ್ಯುತ್, ಕುಡಿಯುವ ನೀರು ಬೇಕು ಎಂದು ಶಿಕ್ಷಣ ಇಲಾಖೆ ಬೇಡಿಕೆ ಇಟ್ಟಿತ್ತು. ಇಂದಿನಿಂದ ಸರ್ಕಾರಿ ಶಾಲೆಗಳಲ್ಲಿ ವಿದ್ಯುತ್, ಕುಡಿಯುವ ನೀರನ್ನು ಉಚಿತವಾಗಿ ನೀಡಲಾಗುವುದು ಎಂದು ವೇದಿಕೆಯಲ್ಲೇ ಸಿಎಂ ಘೋಷಿಸಿದರು.
ಇತ್ತೀಚೆಗೆ ಕನ್ನಡ ಮಾಧ್ಯಮಗಳಲ್ಲಿ ಕಲಿಯುವ ಪ್ರೀತಿ ಕಡಿಮೆ ಆಗುತ್ತಿದೆ. ಇಂಗ್ಲಿಷ್ ಮಾಧ್ಯಮಗಳ ಮೇಲಿನ ವ್ಯಾಮೋಹ ಜಾಸ್ತಿ ಆಗುತ್ತಿದೆ. ಕನ್ನಡ ಶಾಲೆಯಲ್ಲಿ ಓದಿದರೆ ಕೆಲಸ ಸಿಗುವುದಿಲ್ಲ ಎನ್ನುವ ಕಲ್ಪನೆ ಇದೆ. ಈ ಕಲ್ಪನೆ ಬಿಡಬೇಕು. ಕನ್ನಡ ಮಾಧ್ಯಮಗಳಲ್ಲಿ ಕಲಿಯುವ ಕೆಲಸ ಆಗಬೇಕು ಎಂದು ಸಲಹೆ ನೀಡಿದರು.
ನಮ್ಮ ಪ್ರಯತ್ನಕ್ಕೆ ಕೋರ್ಟ್‌ಗಳು ಸಹಕಾರ ನೀಡುತ್ತಿಲ್ಲ. ತಮ್ಮ ಮಕ್ಕಳು ಯಾವ ಭಾಷೆಯಲ್ಲಿ ಕಲಿಯಬೇಕು ಅಂತ ಪೋಷಕರು ನಿರ್ಧಾರ ಮಾಡಬಹುದು ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ನಮ್ಮ ಪ್ರಯತ್ನಕ್ಕೆ ಹಿನ್ನಡೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ. ಕನಿಷ್ಠ ಎಸ್ಎಸ್ಎಲ್ಸಿವರೆಗೆ ಕನ್ನಡ ಮಾಧ್ಯಮದಲ್ಲಿ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದ ಸಿಎಂ ಅವರು, ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.
ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು.
ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.










