ಕನ್ನಡದ ಹಿರಿಯ ನಟ ಶಿವರಾಂ ನಿಧನ ; ಕಂಬನಿ ಮಿಡಿದ ಗಣ್ಯರು…

88
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಎಸ್.ಶಿವರಾಂ ಅವರು ಇಂದು ನಿಧನರಾಗಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಹಿರಿಯ ನಟನ ನಿಧನಕ್ಕೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಮ್ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಮ್ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ, ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರು ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರಿದ್ದಾರೆ.

ಶಾಸಕ ರೇಣುಕಾಚಾರ್ಯ ಅವರು ಸಹ ಶ್ರದ್ಧಾಂಜಲಿ ಕೋರಿದ್ದಾರೆ. ‘ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶಿವರಾಂ ಅವರ ಅಗಲಿಕೆಯ ವಿಷಯ ಕೇಳಿ ದುಃಖವಾಯಿತು. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಿ ಅವರ ಕುಟುಂಬಕ್ಕೆ ಮತ್ತು ಅಭಿಮಾನಿ ಬಳಗಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ಪೋಷಕ ನಟರಾಗಿದ್ದ ಶಿವರಾಂ ಅವರು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ, ಹಿತೈಷಿಗಳಿಗೆ ದು:ಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಾರ್ಥಿಸಿದ್ದಾರೆ.

ಸಚಿವ ಅಶ್ವತ್ಥ್ ನಾರಾಯಣ್ ಟ್ವೀಟ್ ಮಾಡಿ, ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಅವರ ಅಗಲಿಕೆಯ ಸುದ್ದಿ ನೋವು ಹಾಗೂ ಆಘಾತ ತಂದಿದೆ. ದಶಕಗಳಿಂದ ಕನ್ನಡ ಕಲಾಸೇವೆಯಲ್ಲಿ ತೊಡಗಿಸಿಕೊಂಡು, ಚಿತ್ರರಂಗದ ಹೊಸ ತಲೆಮಾರಿನ ಕಲಾವಿದರಿಗೆ ಮಾರ್ಗದರ್ಶಕರಾಗಿದ್ದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬ-ಹಿತೈಷಿ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ದೊರಕಲಿ ಎಂದು ಕಂಬನಿ ಮಿಡಿದಿದ್ದಾರೆ.