ಚಿಕ್ಕಮಗಳೂರು: ಕನ್ನಡಿಗರು ತಮ್ಮ ಮಾತೃಭಾಷೆಯನ್ನು ಯಾವುದೇ ಕಾರಣಕ್ಕೂ ಕಡೆಗಣಿಸಬಾರದು. ಕನ್ನಡದಲ್ಲೇ ಮಾತನಾಡುವ ಮೂಲಕ ಅದನ್ನು ಜತನದಿಂದ ಕಾಪಾಡಬೇಕು ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಭಾಗ್ಯ ಸಲಹೆ ಮಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಬಿಳೀಕಲ್ಲು ಗ್ರಾಮದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಿನ್ನೆ ಏರ್ಪಡಿಸಿದ್ದ ಶ್ರಾವಣ ಸಂಭ್ರಮದಲ್ಲಿ ಮತ್ತೆ ಕಲ್ಯಾಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಕನ್ನಡ ನಾಶವಾದರೆ, ಈ ನಾಡಿನ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ, ಪರಂಪರೆ ಸೇರಿದಂತೆ ಎಲ್ಲವೂ ನಾಶವಾಗುತ್ತವೆ ಎಂದು ಎಚ್ಚರಿಸಿದ ಅವರು, ಬದುಕಿಗಾಗಿ ಯಾವ ಭಾಷೆಯನ್ನು ಬೇಕಾದರೂ ಕಲಿಯಿರಿ. ಆದರೆ, ಮಾತೃಭಾಷೆಯಲ್ಲೇ ವ್ಯವಹರಿಸಿ, ಕನ್ನಡದ ಕಂಪನ್ನು ಎಲ್ಲೆಡೆ ಹರಡಿಸಿ ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನ್ಯಾಯವಾದಿ ಬಿ.ಆರ್.ಜಗದೀಶ್, ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಎಲ್ಲರ ಕರ್ತವ್ಯವಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಶ್ರಾವಣ ಸಂಜೆ ಕಾರ್ಯಕ್ರಮ ಸೇರಿದಂತೆ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಎಲ್ಲೆಡೆ ನಿರಂತರವಾಗಿ ನಡೆಸುವ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸಲಹೆ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಬಿಸಲೇಹಳ್ಳಿ ಸೋಮಶೇಖರ್ ಮಾತನಾಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಧನ್ಯವಾದ ಅರ್ಪಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಪರಿಷತ್ತಿನ ಮೂಲಕ ಶ್ರಾವಣ ಸಂಜೆ ಕಾರ್ಯಕ್ರಮವನ್ನು ನಿರಂತರವಾಗಿ ನಡೆಸುವ ಮೂಲಕ ಶರಣರ ತತ್ವಗಳನ್ನು ಎಲ್ಲೆಡೆ ಪಸರಿಸಲಾಗುತ್ತಿದೆ ಎಂದು ತಿಳಿಸಿದರು.
ಉಪನ್ಯಾಸಕಿ ನಾಗಶ್ರೀ ತ್ಯಾಗರಾಜ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಎಚ್.ಆರ್.ಕಾಂತರಾಜ್ ಮಾತನಾಡಿದರು.
ತಾಲೂಕು ಕ.ಸಾ.ಪ. ಪ್ರಧಾನ ಸಂಚಾಲಕ ಎಂ.ಕುಮಾರಸ್ವಾಮಿ, ಸಂಚಾಲಕ ಜಿ.ಈಶ್ವರಪ್ಪ, ಕಾರ್ಯಕಾರಿ ಸಮಿತಿ ಸದಸ್ಯೆ ವೀಣಾ ಅರವಿಂದ್, ಶಿಕ್ಷಕ ಜಯಶಂಕರ್ ಉಪಸ್ಥಿತರಿದ್ದರು.










