ನವದೆಹಲಿ : ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ನಿರೀಕ್ಷೆಯಂತೆಯೇ ಮಲ್ಲಿಕಾರ್ಜುನ ಖರ್ಗೆ ಅವರು ಗೆಲುವು ಕಂಡಿದ್ದಾರೆ. 24 ವರ್ಷದ ಬಳಿಕ ಗಾಂಧಿಯೇತರ ವ್ಯಕ್ತಿ ಪಕ್ಷದ ಸಾರಥ್ಯ ವಹಿಸಿಕೊಂಡಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಇಬ್ಬರು ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕಾಗಿ ಸ್ಪರ್ಧಿಸಿದ್ದರು. ಇಂದು ಮತ ಎಣಿಕೆ ನಡೆದಿದ್ದು, ಮಲ್ಲಿಕಾರ್ಜುನ್ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ ಪಡೆದಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಯಾಗಿದ್ದವು ಈ ಪೈಕಿ 416 ಮತಗಳು ಅಮಾನ್ಯಗೊಂಡಿದ್ದವು. ಈವರೆಗೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ 6 ಬಾರಿ ಚುನಾವಣೆ ನಡೆದಿತ್ತು.
ಮಲ್ಲಿಕಾರ್ಜುನ ಖರ್ಗೆ ಅವರು ಎಸ್ ನಿಜಲಿಂಗಪ್ಪ ಅವರ ಬಳಿಕ, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕದ ಎರಡನೇ ವ್ಯಕ್ತಿ ಎನಿಸಿದ್ದಾರೆ. ಹಾಗೆಯೇ ಜಗಜೀವನ್ ರಾಮ್ ಅವರ ನಂತರ ಕಾಂಗ್ರೆಸ್ ಹೊಣೆಗಾರಿಕೆ ವಹಿಸಿಕೊಂಡ ಎರಡನೇ ದಲಿತ ನಾಯಕರಾಗಿದ್ದಾರೆ.










