ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ- ಸಿ.ಟಿ. ರವಿ

71
firstsuddi

ಬೆಂಗಳೂರು: ಅಕ್ಕಿ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ. ಕಾಂಗ್ರೆಸ್ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಎಳೆದು ತರಲು ಹರಸಾಹಸ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಅವರು ಕಿಡಿಕಾರಿದ್ದಾರೆ.

ಅಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ. ಇನ್ನು ಇದರ ಬಗ್ಗೆ ಸಿ.ಟಿ. ರವಿ ಅವರು ಮಾಧ್ಯಮಗಳ ಪ್ರಕಟಣೆ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ , ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ಈಗ ರಾಜ್ಯ ಸರ್ಕಾರಕ್ಕೆ, ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ. ಅನಗತ್ಯವಾಗಿ ಕಾಂಗ್ರೆಸ್, ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯನವರೇ ನೀವು ನೀಡಿರುವ ಹತ್ತು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ. ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡಬಾರದು ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರಬಾರದು. ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಸಿ.ಟಿ. ರವಿ ಅವರು ಆಕ್ಷೇಪಿಸಿದ್ದಾರೆ.