ಕಾಂಗ್ರೆಸ್​ನಿಂದ ಬಿ ಫಾರಂ ಪಡೆದ ಜಗದೀಶ್ ಶೆಟ್ಟರ್.

64
firstsuddi

ಬೆಂಗಳೂರು : ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿಯಾಗಿ ಬಿ ಫಾರಂ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಶೆಟ್ಟರ್ ಸಮಾರಂಭದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮೂಲಕ ಬಿ ಫಾರಂ ಸ್ವೀಕರಿಸಿದರು.

ಕಾಂಗ್ರೆಸ್ ಪಕ್ಷ ತನ್ನ ಮೂರು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇನ್ನೂ 15 ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡುವುದು ಬಾಕಿ ಉಳಿದಿದೆ. ಜಗದೀಶ್ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ – ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯನ್ನು ಸಹ ತಡೆಹಿಡಿದಿತ್ತು. ಇಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಂತೆ ಡಿ.ಕೆ ಶಿವಕುಮಾರ್ ಜಗದೀಶ್ ಶೆಟ್ಟರ್ ಅವರಿಗೆ ಬಿ ಫಾರಂ ನೀಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದಿಂದ ಸತತ ಆರು ಬಾರಿ ಆಯ್ಕೆ ಆಗಿದ್ದ ಶೆಟ್ಟರ್ ರಾಜ್ಯ ರಾಜಕಾರಣದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಈ ಬಾರಿ ಹೈಕಮಾಂಡ್ ತಮಗೆ ಟಿಕೆಟ್ ನಿರಾಕರಿಸಿದ್ದರಿಂದ ಬೇಸರಗೊಂಡು ಪಕ್ಷದ ಸ್ಥಾನ ಹಾಗೂ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ನ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಸ್ವೀಕರಿಸಿದ್ದು, 7ನೇ ಬಾರಿಗೆ ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭೆ ಕ್ಷೇತ್ರದ ಶಾಸಕರಾಗುವ ಸಿದ್ಧತೆ ಆರಂಭಿಸಿದ್ದಾರೆ.