ದಾವಣಗೆರೆ : ಕಾರು ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬ್ಯಾಲದಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಗದಿಗೇಶ್(40) ಹಾಗೂ ಚನ್ನಬಸಮ್ಮ(60) ಎಂದು ಗುರುತಿಸಲಾಗಿದೆ. ಕುಂಬಳೂರಿನಿಂದ ಹರಿಹರ ಕಡೆಗೆ ತೆರಳುತ್ತಿದ್ದ ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗದಿಗೇಶ್ ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ವೃದ್ಧೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










