ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ತೀರ್ಮಾನ: ಸಚಿವ ಸತೀಶ್ ಜಾರಕಿಹೊಳಿ.

30

ಬೆಳಗಾವಿ: ಡಿ.ಕೆ ಶಿವಕುಮಾರ್ ಅವರ ಸ್ಥಾನಕ್ಕೆ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ತಿಳಿಸಿದರು. ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ಈ ವಿಚಾರ ನಮ್ಮ ಹಂತದಲ್ಲಿ ನಿರ್ಧಾರವಾಗುವಂತದ್ದಲ್ಲ ಎಂದು ತಿಳಿಸಿದರು. ಪಕ್ಷದ ರಾಜ್ಯ ಘಟಕದಲ್ಲಿ ನಾಯಕತ್ವ ಬದಲಾವಣೆಗೆ ಪಕ್ಷದ ಹಲವು ಜನ ಮುಖಂಡರು ವರಿಷ್ಠರ ಮೇಲೆ ಒತ್ತಡ ಹೇರುತ್ತಲೇ ಇದ್ದಾರೆ. ಒಬ್ಬೊಬ್ಬರು 2 ಕೆಲಸದಲ್ಲಿದ್ದರೆ ಜವಾಬ್ದಾರಿಯನ್ನು ನಿರ್ವಹಿಸುವುದು ಕಷ್ಟವಾಗುತ್ತದೆ. ಈ ಸಂಬಂಧ ಕುರಿತು ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡುವ ಕುರಿತು ಎಲ್ಲರೂ ಸೇರಿ ಚರ್ಚೆಯನ್ನು ಮಾಡಿದ್ದೇವೆ. ಪಕ್ಷ ಸಂಘಟನೆಗೆ ಹೆಚ್ಚು ಸಮಯ ಮೀಸಲಿಡುವಂತಹ ವ್ಯಕ್ತಿಯ ಹೆಸರನ್ನು ಶಿಫಾರಸ್ಸು ಮಾಡಿದ್ದೇವೆ. ಈ ಸ್ಥಾನಕ್ಕೆ ಮೃಣಾಲ್ ಹೆಬ್ಬಾಳ್ಕರ್ ಹೆಸರು ಚರ್ಚೆಗೆ ಬಂದಿಲ್ಲ. ನಿಗಮ, ಮಂಡಳಿಗಳಿಗೆ ಅಧ್ಯಕ್ಷರು, ನಿರ್ದೇಶಕರನ್ನು ನೇಮಕ ಮಾಡುವ ವಿಚಾರದಲ್ಲಿ ಶಿಫಾರಸ್ಸು ಮಾಡಲು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದಾರೆ. ಶೇ.70ರಷ್ಟು ನೇಮಕಾತಿಗಳನ್ನು ಈಗಾಗಲೇ ಮಾಡಲಾಗಿದ್ದು, ಉಳಿದ ಹುದ್ದೆಗಳಿಗೆ ಶೀಘ್ರದಲ್ಲೆಅರ್ಹ ವ್ಯಕ್ತಿಗಳನ್ನು ನೇಮಕ ಮಾಡುತ್ತಾರೆ ಎಂದು ತಿಳಿಸಿದರು.