ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಹೃದಯಾಘಾತದಿಂದ ನಿಧನ…

77
firstsuddi

ಮೈಸೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್(61) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಧ್ರುವನಾರಾಯಣ್ ಅವರಿಗೆ ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ ಜಿಕೆವಿಕೆಯಲ್ಲಿ ಪದವಿ ಪಡೆದಿದ್ದರು. 1983ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಧ್ರುವನಾರಾಯಣ್ 1984 ರಲ್ಲಿ ಜಿಕೆವಿಕೆಯ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಆಯ್ಕೆಯಾದರು. ನಂತರ 1986 ರಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ಚಾರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಹಾಗೇ ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು.

ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಮನಗರ ಕ್ಷೇತ್ರದ ಮೂರು ಕಡೆ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಮನಗರ ತಾಲೂಕಿನ ಮರಳವಾಡಿ, ಹಾರೋಹಳ್ಳಿ ಹಾಗೂ ರಾಮನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಧ್ರುವನಾರಾಯಣ್ ಅವರ ನಿಧನದಿಂದಾಗಿ ಪ್ರಜಾಧ್ವನಿ ಕಾರ್ಯಕ್ರಮ ರದ್ದು ಮಾಡಲಾಗಿದೆ.