ಕೊರೊನಾ ನಿಯಂತ್ರಣ-ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಅವರಿಗೆ ವಿಶ್ವಸಂಸ್ಥೆಯಿಂದ ವಿಶೇಷ ಗೌರವ…

197
firstsuddi

ನ್ಯೂಯಾರ್ಕ್ : ಮಹಾಮಾರಿ ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರಿಗೆ ವಿಶ್ವಸಂಸ್ಥೆ ವಿಶೇಷ ಗೌರವವನ್ನು ಸಲ್ಲಿಸಿದೆ. ಜೂನ್ 23ರಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸೇವಾ ದಿನಾಚರಣೆಯಲ್ಲಿ ಮಹಾಮಾರಿ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಪ್ರಮುಖ ಪಾತ್ರವಹಿಸಿರುವ ವಿವಿಧ ದೇಶಗಳ ಪ್ರತಿನಿಧಿಗಳನ್ನು ಆಹ್ವಾನಿಸಿದ್ದರು. ಅದರಂತೆ ಭಾರತದಿಂದ ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರಿಗೆ ಆಹ್ವಾನ ಸಿಕ್ಕಿತ್ತು. ಬಳಿಕ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊರೊನಾ ನಿಯಂತ್ರಿಸಲು ತೆಗೆದುಕೊಂಡ ಕ್ರಮಗಳನ್ನು ವಿವರಿಸಿದರು. 2018-19ರಲ್ಲಿ ಕೇರಳದಲ್ಲಿ ನಿಫಾ ವೈರಸ್ ಮತ್ತು 2 ಪ್ರವಾಹಗಳು ಕೇರಳ ರಾಜ್ಯವನ್ನು ತಲ್ಲಣಗೊಳಿಸಿತ್ತು. ಈ ವೇಳೆ ತೆಗೆದುಕೊಂಡಿದ್ದ ಕ್ರಮಗಳು ಕೊರೊನಾವನ್ನು ನಿಯಂತ್ರಿಸುವುದಕ್ಕೆ ಸಹಾಯಕವಾಯಿತು. ಹಾಗೂ ವುಹಾನ್‍ನಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದಂತೆ ವಿಶ್ವ ಆರೋಗ್ಯ ಸಂಸ್ಥೆ ನೀಡಿದ ಸೂಚನೆಯನ್ನು ಅನುಸರಿಸಿ ವಿದೇಶದಿಂದ ಬಂದ ಪ್ರತಿಯೊಬ್ಬರನ್ನು ಕ್ವಾರಂಟೈನ್ ಮಾಡಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದಕ್ಕೆ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎಂದು ತಿಳಿಸಿದರು.