ಅಹಮದಾಬಾದ್ : ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದ್ದು, ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ನ ಸೂರತ್ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ.
ಮೋದಿ ಉಪನಾಮಕ್ಕೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ಜೈಲು ಶಿಕ್ಷೆಗೆ ತಡೆ ನೀಡುವಂತೆ ಕೋರಿ ರಾಹುಲ್ ಗಾಂಧಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಆರ್. ಪಿ. ಮೊಗೇರ ಅವರು ಇಂದು ರಾಹುಲ್ ಅರ್ಜಿಯನ್ನು ವಜಾಗೊಳಿಸಿ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದ್ದಾರೆ.
ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ಹರಿಹಾಯ್ದಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ಮಾರ್ಚ್ 23 ರಂದು ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಇದರ ಜೊತೆ ಈ ಶಿಕ್ಷೆಯನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು 30 ದಿನಗಳ ಅವಕಾಶ ನೀಡಿ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿತ್ತು.










