ಗಣೇಶ ಚತುರ್ಥಿ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ…

213
firstsuddi

ಬೆಂಗಳೂರು : ದೇಶದಾದ್ಯಂತ ಆಗಸ್ಟ್ 22ರಂದು ಗಣೇಶ ಚತುರ್ಥಿ ಆಚರಣೆ ನಡೆಯಲಿದ್ದು, ಈ ಹಬ್ಬವನ್ನು ರಾಜ್ಯದಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ರಾಜಜ್ಯದಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಶ್ರೀ ಗಣೇಶೋತ್ಸವದ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ಆಚರಿಸಬೇಕಾಗಿದ್ದು, ಶ್ರೀ ಗಣೇಶೋತ್ಸವವನ್ನು ಆಚರಿಸುವ ಸಂಬಂಧವಾಗಿ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.
1. ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಗಳಲ್ಲಿಯೇ ಆಚರಿಸುವುದು.
2. ಶ್ರೀ ಗಣೇಶೋತ್ಸವ ಹಬ್ಬವನ್ನು ಸಾರ್ವಜನಿಕ ಸ್ಥಳ (ರಸ್ತೆ, ಗಲ್ಲಿ, ಓಣಿ ಮೈದಾನ ಇತ್ಯಾದಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಬಾರದು.
3. ಯಾವುದೇ ಕಾರಣಕ್ಕೂ ನದಿ, ಕೆ, ಕೊಳ, ಬಾವಿ ಮತ್ತು ಕಲ್ಯಾಣಿಗಳಲ್ಲಿ ಶ್ರೀ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡತಕ್ಕದ್ದಲ್ಲ.
4. ಶ್ರೀ ಗಣೇಶೋತ್ಸವದಲ್ಲಿ ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸಿ ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ.
5. ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಆವರಣದಲ್ಲೇ ವಿಸರ್ಜನೆ ಮಾಡುವುದು.
6. ರ್ಶರೀ ಗಣೇಶ ಹಬ್ಬ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಶನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ 06 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು, ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳ ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರತಕ್ಕದ್ದು.
7. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟಿನಿಟ್ಟಾಗಿ ಪಾಲಿಸತಕ್ಕದ್ದು, ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಸೂಚಿಸತಕ್ಕದ್ದು.
8. ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ/ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.
9. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ರ್ಶರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬರದಂತೆ ಕಾಪಾಡುವುದು.
10. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ ಅಥವಾ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾರ್ಯ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.
ಈ ಮಾರ್ಗ ಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಇತರೆ ಇಲಾಖಾ ಮುಖ್ಯಸ್ಥರುಗಳು ಹಾಗೂ ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಆದೇಶ ನೀಡಿದ್ದಾರೆ.