ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಸಿಸಿಬಿ ಪೊಲೀಸರು ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ಬಂಧಿಸಿದ್ದಾರೆ.
ಹಾಸನ ಮೂಲದ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿರುವ ಪುನೀತ್ ಕೆರೆಹಳ್ಳಿ 2013 ರಿಂದ 2023 ರವರಗೆ 10 ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಸಮಾಜದಲ್ಲಿ ಶಾಂತಿ ಕದಡುವ ಯತ್ನ, ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಪದೇ ಪದೇ ಭಾಗಿಯಾದ ಹಿನ್ನೆಲೆಯಲ್ಲಿ ಮೇಲಿಂದ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪುನೀತ್ ಕೆರೆಹಳ್ಳಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪುನೀತ್ ಕೆರೆಹಳ್ಳಿ ವಿರುದ್ಧ ಡಿಜೆ ಹಳ್ಳಿ, ಬೇಗೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ, ಮಳವಳ್ಳಿ ಮತ್ತು ಸಾತನೂರು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.
ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಪೊಲೀಸರು ನೇರವಾಗಿ ಜೈಲಿಗೆ ಕಳುಹಿಸಿದ್ದಾರೆ. ಗೂಂಡಾ ಕಾಯ್ದೆಯಲ್ಲಿ ಬಂಧನಕ್ಕೆ ಒಳಗಾದ ಆರೋಪಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯ ಇಲ್ಲ ಮತ್ತು ಒಂದು ವರ್ಷ ಜಾಮೀನು ಸಿಗುವುದಿಲ್ಲ.
ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸುತ್ತಿದ್ದರು. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್‌ಗೆ ತಿಳುವಳಿಕೆ ನೋಟಿಸ್ ಜಾರಿ ಮಾಡಿದ್ದರು.
ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡಿದ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆಗೈದ ಆರೋಪ ಪುನೀತ್ ಮೇಲೆ ಬಂದಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯ ಜಾಮೀನು ನೀಡಿತ್ತು.










