ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಎಬಿವಿಪಿ ಕಾರ್ಯಯರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.
ಜಯಮಹಲ್ ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ನಿಭಾಯಿಸುವಲ್ಲಿ ವಿಫಲರಾದ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಇದರ ಜೊತೆಗೆ ಎಸ್ಡಿಪಿಐ, ಪಿಎಫ್ಐ ನಿಷೇಧಿಸಬೇಕು ಎಂದು ಒತ್ತಾಯಿಸಿದ ಎಬಿವಿಪಿ ಕಾರ್ಯಕರ್ತರು ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ ಎಂದು ಘೋಷಣೆ ಕೂಗಿದ್ದಾರೆ.
ಈ ಪ್ರತಿಭಟನೆ ಅತಿರೇಕಕ್ಕೆ ಹೋಗಿದ್ದು, ನಿವಾಸದ ಗೇಟ್ ತಳ್ಳಿ ಒಳನುಗ್ಗಿದ ಕಾರ್ಯಕರ್ತರು, ಮನೆ ಬಾಗಿಲು ತೆರೆದು ಒಳನುಗ್ಗಲು ಯತ್ನಿಸಿದ್ದಾರೆ. ಈ ಹಿನ್ನಲೆಯಲ್ಲಿ ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ಬಳಿಕ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದರು. ಸದ್ಯ ಗೃಹ ಸಚಿವರು ಶಿವಮೊಗ್ಗದಲ್ಲಿ ಇದ್ದಾರೆ.










