ಚಿಕ್ಕಮಗಳೂರು : ಜಿಲ್ಲಾ ಸರ್ಜನ್ ಡಾ| ಎಸ್.ಕುಮಾರ್ ಅವರ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿಗಳ ಆಪ್ತ ಸಹಾಯಕ ಹರೀಶ್ ಅವರನ್ನು ಇಂದು ಭೇಟಿ ಮಾಡಿದ ಸಮಿತಿಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಡಾ| ಎಸ್.ಕುಮಾರ್ ಅವರು ಜಿಲ್ಲಾ ಸರ್ಜನ್ ಆದ ನಂತರ ನಗರದ ಸರ್ಕಾರಿ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂಧಿಸುತ್ತಿದ್ದಾರೆ ಎಂದು ಮನವಿಯಲ್ಲಿ ಹೇಳಿದ್ದಾರೆ.
ಜಿಲ್ಲಾ ಆಸ್ಪತ್ರೆಗೆ ಕುಡಿಯುವ ನೀರಿನ ವ್ಯವಸ್ಥೆ, ಸುಸಜ್ಜಿತ ಪ್ರಯೋಗಾಲಯ, ಸಿ.ಟಿ.ಸ್ಯ್ಕಾನಿಂಗ್ ಸೆಂಟರ್, ಅತ್ಯುತ್ತಮ ರಕ್ತನಿಧಿ ಕೇಂದ್ರ, ಹಿರಿಯ ನಾಗರಿಕರಿಗೆ ಪ್ರತ್ಯೇಕ ಚಿಕಿತ್ಸಾ ಘಟಕ ತೆರೆದಿದ್ದಾರೆ. ಬಡ ರೋಗಿಗಳಿಗೆ ಖಾಸಗಿ ಮೆಡಿಕಲ್ ಶಾಪ್‍ಗಳಿಗೆ ಔಷಧಿಗಳಿಗೆ ಚೀಟಿ ಬರೆದುಕೊಡುವುದನ್ನು ನಿಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಜಿಲ್ಲಾ ಸರ್ಜನ್ ಆಗಿಯೂ ಸಹ ಅನೇಕ ಶಸ್ತ್ರಚಿಕಿತ್ಸೆಗಳನ್ನು ಅವರೇ ಮಾಡುತ್ತಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹಗಲು ರಾತ್ರಿಯೆನ್ನದೆ ದುಡಿಯುತ್ತಿರುವ ಅವರನ್ನು ಇಂತಹ ಸನ್ನಿವೇಶದಲ್ಲಿ ಯಾವ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ವರ್ಗಾವಣೆ ರದ್ದುಗೊಳಿಸದಿದ್ದಲ್ಲಿ ಲಾಕ್‍ಡೌನ್ ತೆರವಿನ ನಂತರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಖಜಾಂಚಿ ಆರ್.ಶೇಖರ್, ಮುಖಂಡರಾದ ಪರಮೇಶ್, ಕೃಷ್ಣಮೂರ್ತಿ ಹಾಜರಿದ್ದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಜಿಲ್ಲಾ ಸರ್ಜನ್ ಡಾ| ಎಸ್.ಕುಮಾರ್ ಅವರ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ...










