ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಕೊರೊನಾ ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಇಂದು ಬೆಳಿಗ್ಗೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನಗರದ ಮಾರ್ಕೆಟ್ ರಸ್ತೆಯ ನಿವಾಸಿ 62 ವರ್ಷದ ವೃದ್ಧನಿಗೆ ಜುಲೈ 2ರಂದು ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಬಳಿಕ ಅವರನ್ನು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:30ರ ಸುಮಾರಿಗೆ ಮೃತಪಟ್ಟಿದ್ದು, ಮೃತ ವೃದ್ಧ ಈ ಮೊದಲೇ ವೃದ್ಧ ಮಧುಮೇಹ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಈವರೆಗೆ 130 ಮಂದಿ ಸೋಂಕಿತರು ಪತ್ತೆಯಾಗಿದ್ದು, ಅವರಲ್ಲಿ 71 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನುಳಿದ 56 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅಲ್ಲದೇ ಈವರೆಗೆ ಸೋಂಕಿನಿಂದ ಮೂವರು ಬಲಿಯಾಗಿದ್ದಾರೆ.










