ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಶನಿವಾರ ನಡೆದಿದೆ.
ವರುಣ್(28) ಎಂಬಾತನೇ ಕೊಲೆಯಾದ ದುರ್ದೈವಿ. ಜಿಲ್ಲೆಯ ತರೀಕೆರೆ ಶಾಸಕ ಶ್ರೀನಿವಾಸ್ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನು ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.
ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ, ವರುಣ್ ಹೊಟ್ಟೆ ಹಾಗೂ ಪಕ್ಕೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವರುಣ್ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಎಸ್ಪಿ ಉಮಾ ಪ್ರಶಾಂತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










