ಚಿಕ್ಕಮಗಳೂರು : ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣದ ಹುನ್ನಾರವನ್ನು ಕೈಬಿಡುವಂತೆ ಜಿಲ್ಲಾ ಬಹುಜನ ಸಮಾಜ ಪಕ್ಷ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಂ ಅವರನ್ನು ಇಂದು ಭೇಟಿ ಮಾಡಿದ ಪಕ್ಷದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿ ಬ್ಯಾಂಕುಗಳ ಖಾಸಗೀಕರಣವನ್ನು ಖಂಡಿಸಿದರು.
ಸರ್ಕಾರದ ಅಧೀನದಲ್ಲಿ 4 ರಿಂದ 5 ಬ್ಯಾಂಕುಗಳನ್ನು ಉಳಿಸಿಕೊಂಡು ಉಳಿದವುಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆದಿರುವುದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೋರ್ವರ ಹೇಳಿಕೆಯಿಂದ ಬಯಲಿಗೆ ಬಂದಿದೆ ಎಂದು ತಿಳಿಸಿದರು.
ಈಗಾಗಲೇ ಪ್ರಸಕ್ತ ಹಣಕಾಸು ವರ್ಷದಲ್ಲಿ ಬ್ಯಾಂಕುಗಳ ವಸೂಲಾಗದ ಸಾಲದ ಪ್ರಮಾಣ ಹೆಚ್ಚಳವಾಗುವ ಸಾಧ್ಯತೆ ಇದೆ, ಈ ಸಂದರ್ಭದಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಸಾಲ ಪಡೆದಿರುವ ದೊಡ್ಡ ದೊಡ್ಡ ಉದ್ಯಮಿಗಳನ್ನು ರಕ್ಷಿಸಲು ಈ ತಂತ್ರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂಬ ಅನುಮಾನ ಬಲವಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಕೇಂದ್ರದಲ್ಲಿ ಆಡಳಿತಕ್ಕೆ ಬಂದಾಗಿನಿಂದ ಇದುವರೆಗೆ ಯಾವುದೇ ಹೊಸ ಉದ್ಯಮವನ್ನಾಗಲಿ ಅಥವಾ ಹೊಸ ಬ್ಯಾಂಕುಗಳನ್ನಾಗಲಿ ಸ್ಥಾಪನೆ ಮಾಡಿಲ್ಲ, ಅದರ ಬದಲಿಗೆ ರೈಲ್ವೆ, ಭಾರತೀಯ ಜೀವಮಾನ ನಿಗಮ, ಬಿಎಸ್‍ಎನ್‍ಎಲ್ ಸೇರಿದಂತೆ ಅನೇಕ ಕಂಪನಿಗಳನ್ನು, ಬ್ಯಾಂಕುಗಳನ್ನು ಖಾಸಗೀಕರಣ ಮಾಡುವ ಮೂಲಕ ಸಾರ್ವಜನಿಕ ವಲಯವನ್ನು ದಿವಾಳಿಯೆಬ್ಬಿಸಿ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಡಲು ಮುಂದಾಗಿರುವುದು ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.
ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ರಾಜ್ಯ ಕಾರ್ಯದರ್ಶಿ ಪಿ.ಪರಮೇಶ್ವರ, ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ಪದಾಧಿಕಾರಿಗಳಾದ ವಸಂತ, ಕೆ.ಬಿ.ಸುಧಾ, ಕೆ.ಎಸ್.ಮಂಜುಳಾ, ಪುಷ್ಪಾ ಹಾಜರಿದ್ದರು.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣದ ಹುನ್ನಾರವನ್ನು ಕೈಬಿಡುವಂತೆ ಜಿಲ್ಲಾ ಬಹುಜನ ಸಮಾಜ ಪಕ್ಷದಿಂದ ಕೇಂದ್ರ...










