ಚಿಕ್ಕಮಗಳೂರು : ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಿಎಸ್ ಪಿ ಒತ್ತಾಯ…

189
firstsuddi

ಚಿಕ್ಕಮಗಳೂರು : ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಛೇರಿಯ ಶಿರಸ್ತೇದಾರ್ ಮನು ಅವರನ್ನು ಇಂದು ಭೇಟಿ ಮಾಡಿದ ಪಕ್ಷದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.

ಕೊರೊನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಮತ್ತು ವೇಗವಾಗಿ ಹರಡುತ್ತಿರುವುದು ಗೊತ್ತಿದ್ದರೂ ಸಹ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಆರೋಪಿಸಿದರು.

ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದರಿಂದಾಗಿ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳ ಸಂಬಂಧಿಕರು ಮತ್ತು ಸಾರ್ವಜನಿಕರು ಮುಕ್ತವಾಗಿ ಓಡಾಡುತ್ತಿದ್ದಾರೆ. ವಾರ್ಡ್‍ಗೆ ತೆರಳಿ ರೋಗಿಗಳೊಂದಿಗೆ ದಿನವಿಡೀ ಕುಳಿತುಕೊಳ್ಳುವುದು ನಂತರ ಆಚೆ ಬಂದು ಸಾರ್ವಜನಿಕರೊಂದಿಗೆ ಬೆರೆಯುವುದು ಮಾಡುತ್ತಿದ್ದಾರೆ ಇದರಿಂದಾಗಿ ಸೋಂಕು ತೀವ್ರವಾಗಿ ಹರಡಲು ಅವಕಾಶವಾಗಿದೆ ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ರೋಗಿಗಳ ಸಂಬಂಧಿಕರು ಆಸ್ಪತ್ರೆಯೊಳಗೆ ಓಡಾಡುವುದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿದರು.

ಬಿಎಸ್ ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧಾ, ಧನಂಜಯ, ರವಿಕುಮಾರ್, ಜಯಣ್ಣ ಹಾಜರಿದ್ದರು.