ಛತ್ತಿಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ 11 ಮಂದಿ ಸಾವು…

41
firstsuddi

ಛತ್ತೀಸ್‌ಗಢ: : ಬೊಲೆರೊ ಕಾರುವೊಂದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 11 ಮಂದಿ ಸಾವನ್ನಪ್ಪಿರುವ ಘಟನೆ ಬಲೋದ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ನಡೆದಿದೆ.

ಮೃತರಲ್ಲಿ ಐವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದ್ದಾರೆ. ಮೃತರು ಧಮ್ತರಿ ಜಿಲ್ಲೆಯ ಸೋರಂ-ಭಟಗಾಂವ್ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ನಿಮಿತ್ತ ಕಂಕೇರ್ ಜಿಲ್ಲೆಯ ಮರ್ಕಟೋಲಾ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಈ ವೇಳೆ ಜಾಗತ್ರಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ-30ರಲ್ಲಿ ಬೊಲೆರೊ ಕಾರುವೊಂದಕ್ಕೆ ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಕಾರ್‌ನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಹೆಣ್ಣು ಮಗು ಗಂಭೀರ ಗಾಯಗೊಂಡು ಚಿಕಿತ್ಸೆಗಾಗಿ ರಾಯ್‌ಪುರದ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದೆ. ಘಟನೆ ಬಳಿಕ ಹೆದ್ದಾರಿಯಲ್ಲಿ ಸಾಗುತ್ತಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ವಾಹನ ಬಿಟ್ಟು ಪರಾರಿಯಾಗಿರುವ ಟ್ರಕ್ ಚಾಲಕನ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಬಲೋದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.