ಬೆಂಗಳೂರು : ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷದ ವತಿಯಿಂದ ಜನವರಿ 16ರಂದು ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ಸಮಾವೇಶ ಹಮ್ಮಿಕೊಂಡಿದೆ. ಯುವ ಸಮುದಾಯ ಹಾಗೂ ವಿಶೇಷವಾಗಿ ಮಹಿಳೆಯರಿಗೆ ಪಕ್ಷದ ತನ್ನ ತತ್ವ ಸಿದ್ಧಾಂತವನ್ನು ಮನದಟ್ಟು ಮಾಡಿಸುವ ಉದ್ದೇಶದಿಂದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಈ ಕಾರ್ಯಕ್ರಮಕ್ಕೆ ಕರೆಸಲಾಗುತ್ತಿದೆ.
ಪ್ರಿಯಾಂಕಾ ಗಾಂಧಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿ ಕರ್ನಾಟಕದಲ್ಲಿ ಹೆಚ್ಚಿನ ಮಹಿಳಾ ಮತದಾರರನ್ನು ಸೆಳೆಯುವ ಉದ್ದೇಶದಿಂದ ಮಹಿಳಾ ಕಲ್ಯಾಣಕ್ಕಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
ಕಾಂಗ್ರೆಸ್ ನ ರಾಜ್ಯ ಮಹಿಳಾ ಘಟಕವು ಈ ಸಮಾವೇಶವನ್ನು ಆಯೋಜಿಸಿದ್ದು, ವಿವಿಧ ಪಂಚಾಯತ್ ಗಳು ಮತ್ತು ಸಹಕಾರಿ ಸಂಘಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ ಮಹಿಳೆಯರೊಂದಿಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಕೂಡ ಭಾಗವಹಿಸಲಿದ್ದಾರೆ. ಪ್ರತಿ ಬೂತ್ ಅಥವಾ ಪಂಚಾಯಿತಿಯಿಂದ 3ರಿಂದ 10 ಮಹಿಳೆಯರಿಗೆ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.










