ಜಲಗಾಂವ್ : ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ರೈಲಿನಿಂದ ಕೆಳಗೆ ಜಿಗಿದ ಪ್ರಯಾಣಿಕರ ಮೇಲೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮತ್ತೊಂದು ರೈಲು ಹರಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಉತ್ತರ ಮಹಾರಾಷ್ಟ್ರದ ಜಲಗಾಂವ್‍ನಲ್ಲಿ ಬುಧವಾರ ಸಂಜೆ 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಲಕ್ನೋ- ಮುಂಬೈ ಪುಷ್ಪಕ್ ಎಕ್ಸ್‍ಪ್ರೆಸ್ ರೈಲಿನಲ್ಲಿ ಬೆಂಕಿ ಹೊತ್ತಿಕೊಂಡ ವದಂತಿಯಿಂದಾಗಿ ಯಾರೋ ಚೈನ್ ಎಳೆದಿದ್ದರು. ಇದರಿಂದಾಗಿ ಟ್ರೈನ್ ನಿಂತಿದ್ದರಿಂದ ಪುಷ್ಪಕ್ ಎಕ್ಸ್‍ಪ್ರೆಸ್‍ನ ಕೆಲವು ಪ್ರಯಾಣಿಕರು ಕೆಳಗಿಳಿದು ಮತ್ತೊಂದು ಟ್ರ್ಯಾಕ್ ಮೇಲೆ ಹೋಗುತ್ತಿದ್ದರು. ಇದೇ ವೇಳೆ, ಆ ಹಳಿ ಮೇಲೆ ಎದುರಿನಿಂದ ಬರುತ್ತಿದ್ದ ಕರ್ನಾಟಕ ಎಕ್ಸ್‍ಪ್ರೆಸ್ ರೈಲಿಗೆ ಸಿಲುಕಿದ್ದಾರೆ ಎಂದು ಕೇಂದ್ರ ರೈಲ್ವೆ ಅಧಿಕಾರಿಗಳು ವರದಿ ನೀಡಿದ್ದಾರೆ. ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತಲಾ 1.5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 5 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಕಚೇರಿಯಲ್ಲಿ ತಿಳಿಸಲಾಗಿದೆ. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ಗಾಯಾಳುಗಳ ಎಲ್ಲಾ ವೈದ್ಯಕೀಯ ವೆಚ್ಚಗಳನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ತಿಳಿಸಿದ್ದಾರೆ. ಮತ್ತು ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.










