ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಜುಲೈ 19 ಹಾಗೂ 20 ರಂದು ನಡೆಯಲಿದೆ. ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಮಾಡಲು ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗಳು ತಮ್ಮ ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹೋಗಲು ಮತ್ತು ವಾಪಸ್ ಬರಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಬಸ್ ನಲ್ಲಿ ಪ್ರಯಾಣ ಮಾಡುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಸೂಚನೆ ನೀಡಲಾಗಿದೆ.
ಈ ಕುರಿತು ಆದೇಶ ಹೊರಡಿಸಿರುವ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗಮವು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಹಾಜರಾಗುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ನೀಡಿದ್ದಾರೆ.










