ನವದೆಹಲಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣವನ್ನು ದೀಪಾವಳಿ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ತಿಳಿಸಿದ್ದಾರೆ.
ತನಿಖೆಗೆ ಸೂಚಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತಕ್ಷಣ ವಿಚಾರಣೆಗೆ ಕೈಗೆತ್ತಿಕೊಳ್ಳಲು ಯು.ಯು.ಲಲಿತ್ ನಿರಾಕರಿಸಿದರು. ಮುಂದಿನ ತಿಂಗಳು ಮುಖ್ಯ ನ್ಯಾಯಮೂರ್ತಿಗಳು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಬೇರೊಂದು ಪೀಠದಲ್ಲಿ ದೀಪಾವಳಿ ಬಳಿಕ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ತಿಳಿಸಿದರು.
ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 26 ಎಕರೆ ಡಿ ನೋಟಿಫಿಕೇಷನ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಲಂಪಾಷ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಪ್ರಕರಣ ವಿಚಾರಣೆ ನಡೆಸಿದ್ದ ಹೈಕೋರ್ಟ್ ತನಿಖೆಗೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ಬಿ.ಎಸ್.ಯಡಿಯೂರಪ್ಪ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.










