ತಾಯಿ ಗರ್ಭದಲ್ಲಿದ್ದ ಶಿಶು ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್ ವೈದ್ಯರು!

47
firstsuddi

ನವದೆಹಲಿ : ತಾಯಿ ಗರ್ಭದಲ್ಲಿದ್ದ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್‌ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ.

ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ ಸಮಸ್ಯೆ ಇರುವುದು ಪತ್ತೆಯಾಗಿತ್ತು. ವೈದ್ಯರು ಚಿಕಿತ್ಸೆ ಮೂಲಕ ಮಗುವಿನ ಆರೋಗ್ಯ ಸುಧಾರಣೆ ಸಾಧ್ಯ ಎಂದು ತಿಳಿಸಿದ್ದಾರೆ. ನಂತರ ದಂಪತಿ ಚಿಕಿತ್ಸೆಗೆ ಒಪ್ಪಿದ್ದರು. ಬಳಿಕ ಏಮ್ಸ್ ನ ಕಾರ್ಡಿಯೋಥೊರಾಸಿಕ್ ಸೈನ್ಸಸ್ ಸೆಂಟರ್ ನ ತಜ್ಞರ ತಂಡವು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದೆ.

ಶಸ್ತ್ರಚಿಕಿತ್ಸೆಯ ನಂತರ ಗರ್ಭಿಣಿ ಮಹಿಳೆ ಮತ್ತು ಆಕೆಯ ಗರ್ಭದಲ್ಲಿರುವ ಮಗು ಆರೋಗ್ಯವಾಗಿದ್ದಾರೆ. ತಜ್ಞರ ತಂಡವು ತಾಯಿಯ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗು ತಾಯಿಯ ಗರ್ಭದಲ್ಲಿರುವಾಗಲೇ ಕೆಲವು ವಿಧದ ಗಂಭೀರ ಹೃದಯ ಕಾಯಿಲೆಗಳನ್ನು ಪತ್ತೆ ಹಚ್ಚಬಹುದು, ಕೆಲವೊಮ್ಮೆ ಗರ್ಭಾಶಯದಲ್ಲೇ ಚಿಕಿತ್ಸೆ ನೀಡುವುದರಿಂದ ಮಗುವಿನ ಜನನದ ನಂತರ ಆಗುವ ಅಪಾಯವನ್ನು ಸರಿಪಡಿಸಬಹುದು ಎಂದು ವೈದ್ಯರು ಹೇಳಿದ್ದಾರೆ. ಇದೀಗ ವೈದ್ಯರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.