ದೀಪಾವಳಿಗೆ ಹಸಿರು ಪಟಾಕಿ ಮಾರಾಟ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್…

143
firstsuddi

ಬೆಂಗಳೂರು : ದೀಪಾವಳಿ ಹಬ್ಬ ಆಚರಣೆ ವೇಳೆ ಹಸಿರು ಪಟಾಕಿಯನ್ನು ಮಾರಾಟ ಮಾಡಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ದೇಶಾದ್ಯಂತ ಮಹಾಮಾರಿ ಕೊರೊನಾ ವೈರಸ್ ಭೀತಿ ಇರುವುದರಿಂದ ಸೋಂಕನ್ನು ತಡೆಗಟ್ಟಲು ರಾಜ್ಯ ಸರ್ಕಾರ ಪಟಾಕಿ ಮಾರಾಟ ಮಾಡುವುದನ್ನು ನಿಷೇಧಿಸಿ, ಕೇವಲ ಹಸಿರು ಪಟಾಕಿ ಸಿಡಿಸಬಹುದು ಎಂದು ಆದೇಶ ಹೊರಡಿಸಿತ್ತು. ಆದರೆ ರಾಜ್ಯ ಹೈಕೋರ್ಟ್ ಹಸಿರು ಪಟಾಕಿ ಎಂದರೆ ಏನು ಎಂದು ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿತ್ತು. ಬಳಿಕ ಹೈಕೋರ್ಟ್ ಸೂಚನೆಯಂತೆ ಸರ್ಕಾರ ಹಸಿರು ಪಟಾಕಿ ಬಗ್ಗೆ ಮಾಹಿತಿ ನೀಡಿದ್ದು, ಅದರಂತೆ ಹಸಿರು ಚಹ್ನೆ ಹಾಗೂ ನೀರಿ ಪ್ರಮಾಣಿತ ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು ಪಟಾಕಿ ಹೊರತುಪಡಿಸಿ ಬೇರೆ ಯಾವುದೇ ರೀತಿಯ ಪಟಾಕಿಯನ್ನು ಮಾರಾಟ ಮಾಡುವಂತಿಲ್ಲ ಎಂದು ಸೂಚನೆ ನೀಡಿದೆ.

ಅಲ್ಲದೇ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆ, ಸ್ಥಳೀಯ ಆಡಳಿತಗಳು ಪಟಾಕಿ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಈ ಬಗ್ಗೆ ಗಮನಹರಿಸಬೇಕು. ಹಸಿರು ಪಟಾಕಿ ಬಗ್ಗೆ ಜನರಿಗೆ ಮಾಹಿತಿ ತಲುಪಲು ಮಾಧ್ಯಮಗಳಲ್ಲಿ ಜಾಹೀರಾತು ನೀಡಬೇಕು ಎಂದು ಸೂಚನೆ ನೀಡಿದೆ.