ದೆಹಲಿ ಅಬಕಾರಿ ನೀತಿ ಹಗರಣ ಸಂಭಂಧ ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ, ಸಾಕ್ಷಿ ನೀಡುವಂತೆ AAP ಆಗ್ರಹ.

21

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಸಮ್ಮತಿ ಸೂಚಿಸಿದ್ದಾರೆಂದು ತಿಳಿದುಬಂದಿದೆ. ಡಿಸೆಂಬರ್ 5 ರಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿತ್ತು. ಇದೀಗ ಲೆಫ್ಟಿನೆಂಟ್ ಗವರ್ನರ್ ಅವರು ವಿಚಾರಣೆಗೆ ಅನುಮತಿ ನೀಡಿದ್ದಾರೆಂದು ವರದಿಗಳು ತಿಳಿಸಿವೆ. ದೆಹಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ವಿಚಾರಣೆಗೆ ಅನುಮತಿ ನೀಡಿರುವುದು ಕೇಜ್ರಿವಾಲ್ ಅವರಿಗೆ ದೊಡ್ಡ ಸಂಕಷ್ಟ ಎದುರಾದಂತಾಗಿದೆ. ಕೇಜ್ರಿವಾಲ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಆರೋಪದಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು, ಆದರೆ ವಿಚಾರಣೆ ಆರಂಭವಾಗಿರಲಿಲ್ಲ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗಳನ್ನ ವಿಚಾರಣೆಗೆ ಒಳಪಡಿಸಲು ರಾಜ್ಯಪಾಲರ ಅನುಮೋದನೆಯನ್ನು ಸುಪ್ರೀಂ ಕೋರ್ಟ್ ಕಡ್ಡಾಯಗೊಳಿಸಿದ ನಂತರ, ಇಡಿ ಅನುಮತಿ ಕೋರಿ ಪತ್ರ ಬರೆದಿತ್ತು. ಕೇಜ್ರಿವಾಲ್ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮಾಡಿದ ಬಹುದೊಡ್ಡ ಆರೋಪಗಳಲ್ಲಿ ಮದ್ಯ ನೀತಿ ಹಗರಣವೂ ಒಂದಾಗಿದೆ. ಹಗರಣಕ್ಕೆ ಸಂಬಂಧಿಸಿದ ತನಿಖೆ ನಡೆಸುತ್ತಿರುವ ಇಡಿ, ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನ ಬಂಧಿಸಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಎಎಪಿ ಮುಖ್ಯಸ್ಥರು ಸೆಪ್ಟೆಂಬರ್‌ನಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು. ಜೈಲಿಂದ ಬಿಡುಗಡೆಯಾದ ಬಳಿಕ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2025ರ ಚುನಾವಣೆಯಲ್ಲಿ ಜನರು ತಮ್ಮ ಪಕ್ಷವನ್ನು ಮರು ಆಯ್ಕೆ ಮಾಡಿದ ಬಳಿಕವೇ ಉನ್ನತ ಹುದ್ದೆಗಳಿಗೆ ಮರಳುವುದಾಗಿ ಪ್ರತಿಜ್ಞೆ ಮಾಡಿದ್ದರು.