ದ್ವಿತೀಯ ಪಿಯುಸಿ ಫಲಿತಾಂಶ – ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ…

78
firstsuddi

ಬೆಂಗಳೂರು : 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರು ಮಲ್ಲೇಶ್ವರಂನ ಪಿಯುಸಿ ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು. 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶೇಕಡಾ 68.72ರಷ್ಟು ಬಾಲಕಿಯರು ಮತ್ತು ಶೇಕಡಾ 55.22ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಹೆಚ್ಚು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ವಿಜ್ಞಾನ ವಿಭಾಗದ ಶೇ. 72.53ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ 64.97ರಷ್ಟು ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ 48.71ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಗ್ರಾಮಾಂತರ ಭಾಗದಲ್ಲಿ ಶೇಕಡಾ 62.18 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ, ನಗರ ಪ್ರದೇಶದಲ್ಲಿ ಶೇಕಡಾ 61.78 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಪೂರಕ ಪರೀಕ್ಷೆ ದಿನಾಂಕ ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುತ್ತದೆ.

ಇನ್ನೂ ಜಿಲ್ಲಾವಾರು ಫಲಿತಾಂಶ ನೋಡೋದಾದ್ರೆ ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ದಲ್ಲಿದೆ. ಉಡುಪಿ ಶೇ. 86.38 ಫಲಿತಾಂಶದೊಂದಿಗೆ ಎರಡನೇ ಸ್ಥಾನ ಮತ್ತು ವಿಜಯಪುರ ಶೇ.77.14 ಫಲಿತಾಂಶದೊಂದಿಗೆ ಮೂರನೇ ಸ್ಥಾನದಲ್ಲಿದೆ. ಶೇ.49.31 ಫಲಿತಾಂಶದೊಂದಿಗೆ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು www.karresults.nic.in ಹಾಗೂ www.pue.kar.nic.in ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು.