ನಮ್ಮ ಸಭೆಯನ್ನು ಸಹಿಸುವುದಿಲ್ಲವೆಂದು ಯಾರೂ ಹೇಳಿಲ್ಲ: ಗೃಹ ಸಚಿವ ಡಾ. ಜಿ ಪರಮೇಶ್ವರ್.

35

ಬೆಂಗಳೂರು: ಡಿನ್ನರ್ ಸಭೆ ಮುಂದೂಡುವಂತೆ ಕಾಂಗ್ರೆಸ್ ಹೈಕಮಾಂಡ್‍ನಿಂದ ಬಂದಿರುವ ಸೂಚನೆಯ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ನಮ್ಮ ಸಭೆಯನ್ನು ಸಹಿಸಲ್ಲವೆಂದು ಯಾರೂ ಹೇಳಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ ಅಷ್ಟೆ. ಸಭೆಯನ್ನು ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಪರಮೇಶ್ವರ್ ಅವರು ಎಸ್‍ಸಿ, ಎಸ್‍ಟಿ ಶಾಸಕರು, ಸಚಿವರ ಡಿನ್ನರ್ ಮೀಟಿಂಗ್ ಆಯೋಜನೆ ಮಾಡಲು ಮುಂದಾಗಿದ್ದರು. ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು ಸಭೆ ಸೇರಿದ ವಿಚಾರ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪರಮೇಶ್ವರ್ ಸಹ ಡಿನ್ನರ್ ಮೀಟಿಂಗ್ ನಡೆಸಲು ಮುಂದಾಗಿದ್ದರು. ಅತ್ತ ವಿದೇಶ ಪ್ರವಾಸದಿಂದ ದೆಹಲಿಗೆ ಆಗಮಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್ ರಾಜ್ಯದಲ್ಲಿನ ಬೆಳವಣಿಗೆಗಳ ಕುರಿತು ಹೈಕಮಾಂಡ್‍ಗೆ ವರದಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಪರಮೇಶ್ವರ್ ಡಿನ್ನರ್ ಮೀಟ್‍ಗೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಹೈಕಮಾಂಡ್‍ಗೆ ಡಿಸಿಎಂ ಡಿಕೆ ಶಿವಕುಮಾರ್ ದೂರು ನೀಡಿದ್ದಾರೆಯೇ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಪರಮೇಶ್ವರ್, ಆ ಕುರಿತು ನನಗೆ ಗೊತ್ತಿಲ್ಲ. ನಮ್ಮ ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್‍ರನ್ನೂ ಕರೆಯಬೇಕು ಎಂದು ಚರ್ಚೆ ಆಗಿತ್ತು. ರಾಜಕಾರಣ ಮಾಡುವುದಾದರೆ ಓಪನ್ ಆಗಿಯೇ ಮಾಡುತ್ತೇವೆ. ಮುಚ್ಚಿಟ್ಟು ಮಾಡುವಂಥದ್ದೇನೂ ಇಲ್ಲ ಎಂದು ಹೇಳಿದರು. ದಲಿತ ಸಮುದಾಯದ ಮೇಲಿನ ದೌರ್ಜನ್ಯ ಕುರಿತು ಚರ್ಚೆ ಆಗಬೇಕಿದೆ. ಯಾರೂ ನಮ್ಮ ಸಭೆಯನ್ನು ಸಹಿಸುವುದಿಲ್ಲ ಎಂದು ಹೇಳಿಲ್ಲ. ನಮ್ಮ ನಮ್ಮ ಸಭೆ ಸಹಿಸಲ್ಲ ಅಂದರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ. ನಮಗೆ ಆ ಶಕ್ತಿ ಇದೆ ಎಂದು ಪರಮೇಶ್ವರ್ ತಿಳಿಸಿದರು.