ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವಲ್ಲಿ ಮಕ್ಕಳ ಪಾತ್ರ ಅತ್ಯಂತ ಪ್ರಮುಖ: ವಿಜಯಲಕ್ಷ್ಮಿ ವಿಶ್ವನಾಥ್.

58
firstsuddi

ಚಿಕ್ಕಮಗಳೂರು: ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವಲ್ಲಿ ಮಕ್ಕಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ವಿಶ್ವನಾಥ್ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕ ಹಿರೇಮಗಳೂರಿನ ಶ್ರೀ ಪ್ರಭುಲಿಂಗ ಸ್ವಾಮಿ ಪ್ರೌಢಶಾಲೆಯಲ್ಲಿ 50ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಿನ್ನೆ ಆಯೋಜಿಸಿದ್ದ ನುಡಿ ನಿತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಈ ನೆಲದ ಭಾಷೆ, ನಮ್ಮ ಅಸ್ಮಿತೆ, ಅದರಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಅಡಕವಾಗಿದೆ. ಅತಿಯಾದ ಪಾಶ್ಚಾತ್ಯ ಸಂಸ್ಕೃತಿ ಮತ್ತು ಆಂಗ್ಲ ಭಾಷೆಯ ವ್ಯಾಮೋಹದಿಂದಾಗಿ ಯುವಜನತೆ ಮತ್ತು ಹಿರಿಯರಿಗೆ ಮಾತೃಭಾಷೆಯನ್ನು ಉಳಿಸಿ ಬೆಳೆಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ರಾಜ್ಯದಲ್ಲಿ ಕನ್ನಡ ಕಣ್ಮರೆಯಾಗುತ್ತಿದೆ ಎಂದು ವಿಷಾದಿಸಿದರು.

ಕನ್ನಡವನ್ನು ಉಳಿಸಿ ಬೆಳೆಸಲು ಇನ್ನು ಮಕ್ಕಳಿಂದ ಮಾತ್ರ ಸಾಧ್ಯ. ಹಾಗಾಗಿ ಅವರು ನಾವು ಕನ್ನಡ ತಾಯಿಯ ಮಕ್ಕಳು ಎಂಬುದನ್ನು ಮನಗಾಣಬೇಕು. ಮಾತೃ ಭಾಷೆಯಲ್ಲೇ ಮಾತನಾಡುವ ಮೂಲಕ ಅದನ್ನು ಉಳಿಸಿ ಬೆಳೆಸಬೇಕು ಎಂದು ಮನವಿ ಮಾಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿ ರೂಪಾ ನಾಯಕ್, ವಿದ್ಯಾರ್ಥಿಗಳಲ್ಲಿ ನಾಡು, ನುಡಿ, ನೆಲ, ಜಲ ಮತ್ತು ಸಂಸ್ಕೃತಿಯ ಬಗ್ಗೆ ಅಭಿಮಾನ ಕಾಳಜಿ ಮತ್ತು ಜಾಗೃತಿಯನ್ನು ಮೂಡಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ನುಡಿನಿತ್ಯೋತ್ಸವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ವಿದ್ಯಾರ್ಥಿಗಳಿಗೆ ಕನ್ನಡ ಗೀತೆಗಳ ಗಾಯನ ಸ್ಪರ್ಧೆಯನ್ನು ನಡೆಸಲಾಯಿತು. ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಕಸಾಪ ಮಹಿಳಾ ಘಟಕದ ಉಪಾಧ್ಯಕ್ಷೆ ಶೈಲಾ ಬಸವರಾಜ್, ಖಜಾಂಚಿ ಸರೋಜಾ, ಸಂಚಾಲಕಿ ಸಾವಿತ್ರಿ, ಕಾರ್ಯದರ್ಶಿ ಪದ್ಮಾ ಮೋಹನ್, ಉದಯಕುಮಾರ್, ಶಿಕ್ಷಕಿ ವೀಣಾ ಉಪಸ್ಥಿತರಿದ್ದರು.