ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ-ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ…?

256
firstsuddi

ಬೆಂಗಳೂರು : ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಅಮಿತ್ ಶಾ ಅವರನ್ನು ಭೇಟಿಯಾಗಲು ಸಚಿವ ಸ್ಥಾನದ ಆಕಾಂಕ್ಷಿಗಳು ಚಡಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಯಲಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನ 12:15ಕ್ಕೆ ಯಲಹಂಕ ವಾಯುನೆಲೆಗೆ ಬಂದಿಳಿಯಲಿರುವ ಅಮಿತ್ ಶಾ ಅವರು ಮೊದಲು ಬೆಂಗಳೂರಿನಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಬಳಿಕ ಮಧ್ಯಾಹ್ನ 3:15ಕ್ಕೆ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 4:55 ರಿಂದ 5:30ರವರೆಗೆ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮ ಮುಗಿದ ಬಳಿಕ ಅಮಿತ್ ಶಾ ಅವರು ನಗರದ ಡೆನಿಸನ್ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೋಟೆಲ್‍ನಲ್ಲೇ ಅಮಿತ್ ಶಾ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಹಾಗೂ ಯಾರಿಗೆ ಯಾವ ಖಾತೆಯನ್ನು ನೀಡಬೇಕು, ಯಾರಿಂದ ಯಾವ ಖಾತೆಯನ್ನು ಹಿಂಪಡೆಯಬೇಕು ಎಂಬುವುದನ್ನು ಚರ್ಚಿಸಲಿದ್ದಾರೆ ಎನ್ನಲಾಗಿದೆ.