ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ…

49
firstsuddi

ಬೆಂಗಳೂರು: ಜ್ಞಾನಭಾರತಿ ಠಾಣಾ ವ್ಯಾಪ್ತಿಯ ನಾಗದೇವನಹಳ್ಳಿಯಲ್ಲಿನ ಮನೆಯೊಂದರಲ್ಲಿ ಓರ್ವ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಂಜಿತಾ (27) ಮೃತ ದುರ್ದೈವಿ. ಪತಿ ಮಧು ಹತ್ಯೆ ನಡೆಸಿದ್ದಾನೆಂದು ರಂಜಿತಾ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಪತ್ನಿ ರಂಜಿತಾಗೆ ಪತಿ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ರಂಜಿತಾ ಅವರು ತುಮಕೂರು ಜಿಲ್ಲೆ ತುರುವೇಕೆರೆ ಮೂಲದ ಮಧು ಅವರನ್ನು ಐದು ವರ್ಷದ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಮೂರು ವರ್ಷದ ಹೆಣ್ಣು ಮಗು ಇದೆ. ರಂಜಿತಾ ವೃತ್ತಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದರು. ಇನ್ನು ಪತಿ ಮಧು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಮದುವೆಯಾದಗಿನಿಂದಲೂ ಮಧು ಮತ್ತು ಆತನ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ. ವರದಕ್ಷಿಣೆ ನೀಡಿಲ್ಲವೆಂದು ನಮ್ಮ ಮಗಳನ್ನು ಕೊಲೆ ಮಾಡಿದ್ದಾರೆಂದು ರಂಜಿತಾ ಪೋಷಕರು ಆರೋಪ ಮಾಡಿದ್ದಾರೆ. ವರದಕ್ಷಿಣೆ ಕಿರುಕುಳದ ಬಗ್ಗೆ ರಂಜಿತಾ ಆಗಾಗ ತಾಯಿ ಬಳಿ ಹೇಳಿದ್ದರು. ಅಲ್ಲದೆ ರಂಜಿತಾ ಸಾವಿಗೂ ಮುನ್ನ ತಾಯಿಗೆ ವೀಡಿಯೋ ಕಾಲ್ ಮಾಡಿದ್ದರು. ಬಳಿಕ ರಂಜಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಜ್ಞಾನಭಾರತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.