ನ್ಯಾಯಾಲಯ ಕಾರ್ಯಕ್ರಮಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಕಡ್ಡಾಯ : ಹೈಕೋರ್ಟ್ ಆದೇಶ…

79
firstsuddi

ಬೆಂಗಳೂರು : ಕೋರ್ಟ್ ಕಾರ್ಯಕ್ರಮಗಳಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದಲ್ಲಿ ನಿನ್ನೆ ನಡೆದ ಆಡಳಿತಾತ್ಮಕ ಪೂರ್ಣಪೀಠ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದ್ದು, ಸಿಜೆ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಸುತ್ತೋಲೆ ಹೊರಡಿಸಿದ್ದಾರೆ.

ಸುತ್ತೋಲೆಯಲ್ಲಿ ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ (ಜ.26), ಸ್ವಾತಂತ್ರ್ಯ ದಿನಾಚರಣೆ (ಆ.15) ಹಾಗೂ ಸಂವಿಧಾನ ದಿನಾಚರಣೆ (ನ.26) ಸೇರಿದಂತೆ ನ್ಯಾಯಾಲಯಗಳ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಇರಿಸುವ ಕುರಿತು ನಿರ್ಣಯ ಕೈಗೊಂಡಿದೆ. ಅದರಂತೆ ಹೈಕೋರ್ಟ್ ಪ್ರಧಾನ ಪೀಠ, ಧಾರವಾಡ, ಕಲಬುರಗಿ ಪೀಠಗಳು ಹಾಗೂ ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇರಿಸಬೇಕು ಎಂದು ತಿಳಿಸಲಾಗಿದೆ.

ರಾಯಚೂರು ಜಿಲ್ಲಾ ನ್ಯಾಯಾಲಯದಲ್ಲಿ ಪ್ರಧಾನ ಜಿಲ್ಲಾ ನ್ಯಾಯಾಧೀಶರು ಗಣರಾಜ್ಯೋತ್ಸವದ ದಿನದಂದು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಇರಿಸಲಾಗಿದ್ದ ಅಂಬೇಡ್ಕರರ ಭಾವಚಿತ್ರ ತೆಗೆಸಿ ಅಪಮಾನ ಮಾಡಿದರು ಎಂಬ ವರದಿಗಳ ಬೆನ್ನೆಲ್ಲೇ ಇಂತಹ ಮಹತ್ವದ ತೀರ್ಮಾನವನ್ನು ಹೈಕೋರ್ಟ್ ಕೈಗೊಂಡಿದೆ.