ಪರಿಶಿಷ್ಟ ಜಾತಿ ಒಳ ಮೀಸಲಾತಿ ಕುರಿತು ನಾಗಮೋಹನದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚನೆ.

43

ಬೆಂಗಳೂರು: ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೆ ತರುವ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಏಕಸದಸ್ಯ ಆಯೋಗ ರಚಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪ್ರಾಯೋಗಿಕ ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ಆಯೋಗವು 2 ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅದರಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಲಾಗಿದೆ. ಈ ಮೂಲಕ ನಾಲ್ಕು ದಶಕಗಳ ಪರಿಶಿಷ್ಟ ಜಾತಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದಂತಾಗಿದೆ. ಇದರಿಂದ ಒಳಮೀಸಲು ಜಾರಿ ನಿರ್ಣಾಯಕ ಘಟ್ಟ ತಲುಪಿದಂತಾಗಿದೆ. ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯೊಳಗೆ ಒಟ್ಟು 101 ಉಪಜಾತಿಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಹೇಳಿಕೆ ನೀಡಿದ್ದು, ಈ ಎಲ್ಲ ವರ್ಗಗಳನ್ನು ಸೇರಿಸಿ ಪರಿಗಣಿಸಲು ವೈಜ್ಞಾನಿಕ ವಿಧಾನದೊಂದಿಗೆ ಒಳ ಮೀಸಲಾತಿಯನ್ನು ಜಾರಿಗೆ ತರಲು ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದ್ದರು.