ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ…

71
firstsuddi

ಕಾರವಾರ : ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಿರುವುದು ಸಾಕಷ್ಟು ವಿರೋಧಕ್ಕೆ ಕಾರಣವಾಗಿದೆ. 

2017ರ ಡಿಸೆಂಬರ್ 6. ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಪರೇಶ್ ಮೇಸ್ತಾ ಎನ್ನುವ ಯುವಕ ಕಾಣೆಯಾಗಿದ್ದ. ತೀವ್ರ ಹುಡುಕಾಟದ ಬಳಿಕ ಡಿಸೆಂಬರ್ 8ರಂದು ಪಟ್ಟಣದ ಶನೈಶ್ಚರ ದೇವಾಲಯದ ಹಿಂಬದಿಯ ಶೆಟ್ಟಿ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಆತನನ್ನ ಅನ್ಯ ಕೋಮಿನವರು ಹತ್ಯೆ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇಡೀ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಮೃತ ಯುವಕನನ್ನು ಹಿಂದೂ ಕಾರ್ಯಕರ್ತ ಎಂದು ಬಿಂಬಿಸಿದ ಬಿಜೆಪಿ, ಯುವಕನ ಹತ್ಯೆಗೆ ನ್ಯಾಯ ಒದಗಿಸಿಕೊಡುವಂತೆ ಹೋರಾಟಕ್ಕೆ ಮುಂದಾಗಿದ್ದು ಇದು ಇಡೀ ಜಿಲ್ಲೆಯಲ್ಲಿ ದೊಡ್ಡ ಗಲಭೆಗೂ ಕಾರಣವಾಗಿತ್ತು. ಬಳಿಕ ಈ ಪ್ರಕರಣವನ್ನು ಅಂದಿನ ಕಾಂಗ್ರೆಸ್ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಿತ್ತು. ಪ್ರಕರಣ ಸಂಬಂಧ ಜಮಾಲ್ ಅಜಾದ್ ಅಣ್ಣಿಗೇರಿ ಎಂಬಾತನನ್ನು ಎ1 ಆರೋಪಿಯನ್ನಾಗಿ ಮಾಡಿ ಬಂಧಿಸಲಾಗಿತ್ತು.

ಇದೀಗ ಪರೇಶ್ ಮೇಸ್ತಾ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಅಜಾದ್ ಅಣ್ಣಿಗೇರಿಗೆ ಜಿಲ್ಲಾ ಉಪಾಧ್ಯಕ್ಷ ಸ್ಥಾನವನ್ನು ನೀಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಆರೋಪಿಗೆ ವಕ್ಫ್ ಬೋರ್ಡ್ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅಜಾದ್ ಅಣ್ಣಿಗೇರಿಯನ್ನು ಆಯ್ಕೆ ಮಾಡಿದ್ದಾರೆ. ಇದೀಗ ಜಿಲ್ಲೆಯಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.