ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 30 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ.
ಇಲ್ಲಿನ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಿಲ್ಗಿಟ್ ನಿಂದ ರಾವಲ್ಪಿಂಡಿಗೆ ಪ್ರಯಾಣಿಸುತ್ತಿದ್ದ ಬಸ್ ಶಿಥಿಯಾಲ್ ಪ್ರದೇಶದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಬಸ್ ಮತ್ತು ಕಾರು ಎರಡೂ ಕಂದರಕ್ಕೆ ಉರುಳಿವೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಪಾಕಿಸ್ತಾನದ ಅಧ್ಯಕ್ಷ ಡಾ. ಆರಿಫ್ ಅಲ್ವಿ, ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ಗಿಲ್ಗಿಟ್-ಬಾಲ್ಟಿಸ್ತಾನ್ ಮುಖ್ಯಮಂತ್ರಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.










