ಪಿಎಫ್ಐ ಸಂಘಟನೆ ನಿಷೇಧಿಸಿ ಕೇಂದ್ರದ ಮಹತ್ವದ ಆದೇಶ…

63
firstsuddi

ನವದೆಹಲಿ : ಉಗ್ರ ಸಂಘಟನೆಗಳ ಜೊತೆ ಸಂಪರ್ಕ ಹಿನ್ನೆಲೆ ಪಿಎಫ್ಐ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ.

ದೇಶಾದ್ಯಂತ ಪಿಎಫ್ಐ ಸಂಘಟನೆ ಮೇಲೆ ದಾಳಿ ಹಾಗೂ ಹಲವಾರು ಮಂದಿ ಮುಖಂಡರು, ಕಾರ್ಯಕರ್ತರ ಬಂಧನದ ನಂತರ ಇದೀಗ ಕೇಂದ್ರ ಸರ್ಕಾರವು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಮುಂದಿನ ಐದು ವರ್ಷಗಳವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧ ಹೇರಿದೆ.

ಪಿಎಫ್ಐ ಅಂಗಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (ಆರ್ ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (ಎನ್ ಸಿಎಚ್ ಆರ್ ಒ), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.

ಪಿಎಫ್ಐ ಮತ್ತು ಅದರ ಅಂಗಸಂಸ್ಥೆಗಳು ಕಾನೂನುಬಾಹಿರ ಕೆಲಸಗಳಲ್ಲಿ ತೊಡಗಿಸಿಕೊಂಡಿವೆ. ದೇಶದ ಸಮಗ್ರತೆ, ಸಾರ್ವಭೌಮತೆ ಮತ್ತು ಭದ್ರತೆಗೆ ಪೂರ್ವಾಗ್ರಹ ಚಟುವಟಿಕೆಗಳು ಮತ್ತು ಸಾರ್ವಜನಿಕ ಶಾಂತಿ ಮತ್ತು ದೇಶದ ಕೋಮು ಸೌಹಾರ್ದತೆಗೆ ಭಂಗ ತರುವ ಮತ್ತು ದೇಶದಲ್ಲಿ ಉಗ್ರತ್ವವನ್ನು ಬೆಂಬಲಿಸುವ ಕೆಲಸವನ್ನು ಮಾಡುತ್ತಿವೆ. ದೇಶದ ಸಾಂವಿಧಾನಿಕ ಅಧಿಕಾರ ಹಾಗೂ ಸಾಂವಿಧಾನಿಕ ಸಂಸ್ಥೆಗಳಿಗೆ ಸಂಪೂರ್ಣ ಅಗೌರವವನ್ನು ತೋರಿಸುತ್ತದೆ ಎಂದು ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿದೆ.