ಪಿಎಫ್‍ಐ ಬ್ಯಾನ್ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ…

57
firstsuddi

ಬೆಂಗಳೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪಿಎಫ್ಐ ಬ್ಯಾನ್ ಪ್ರಶ್ನಿಸಿ ನಾಸೀರ್ ಅಲಿ ಎನ್ನುವವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ. 28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ತೀರ್ಪು ಪ್ರಕಟಿಸಿದ್ದು, ಕೇಂದ್ರ ಸರ್ಕಾರ ಆದೇಶವನ್ನು ಎತ್ತಿಹಿಡಿದಿದೆ.

ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ ಪಿಎಫ್ ಐ ಕಾನೂನು ಬಾಹಿರ ಸಂಘಟನೆ ಎನ್ನುವುದಕ್ಕೆ ಕೇಂದ್ರ ಸರ್ಕಾರ ಸೂಕ್ತ ಕಾರಣ ನೀಡಿಲ್ಲ. ತಕ್ಷಣದ ಬ್ಯಾನ್ ಗೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದ ಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ಅರ್ಜಿದಾರರ ಪರ ವಕೀಲ ಜಯಕುಮಾರ್ ಎಸ್.ಪಾಟೀಲ್ ವಾದ ಮಂಡಿಸಿದ್ದರು.

ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪಿಎಫ್ ಐ ಸಂಘಟನೆಯಿಂದ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಸರ್ಕಾರದಿಂದಲೇ ಪಿಎಫ್ಐ ಸಂಘಟನೆ ನಿರ್ಬಂಧಿಸಲಾಗಿದೆ ಎಂದಿದ್ದರು.