ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪುತ್ರ ಬಿ.ವೈ.ವಿಜಯೇಂದ್ರಗೆ ಶಿಕಾರಿಪುರ ಕ್ಷೇತ್ರವನ್ನು ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.
ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಎಸ್ ವೈ, ನಾನು ಕ್ಷೇತ್ರ ಬಿಟ್ಟುಕೊಡುತ್ತಿದ್ದರಿಂದ ಶಿಕಾರಿಪುರದಿಂದ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ಬಹಳ ದೊಡ್ಡ ಅಂತರದಲ್ಲಿ ಅವನನ್ನು ಗೆಲ್ಲಿಸಿಕೊಡಬೇಕು ಅಂತಾ ಶಿಕಾರಿಪುರ ಜನತೆಯಲ್ಲಿ ಕೈಜೋಡಿಸಿ ಪ್ರಾರ್ಥನೆ ಮಾಡುತ್ತಿದ್ದೇನೆ ಎಂದರು.
ಹಳೆ ಮೈಸೂರು ಭಾಗದಲ್ಲಿ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಇದೆ. ಆದರೆ ನಾನು ಕ್ಷೇತ್ರ ಖಾಲಿ ಮಾಡುತ್ತಿರುವುದರಿಂದ ವಿಜಯೇಂದ್ರ ಶಿಕಾರಿಪುರದಲ್ಲಿ ನಿಲ್ಲಲಿದ್ದಾರೆ ಎಂದು ತಿಳಿಸಿದರು.
ತಂದೆ ಯಡಿಯೂರಪ್ಪ ಅವರು ತಮಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪುತ್ರ ವಿಜಯೇಂದ್ರ ಅವರು, ತಂದೆಯ ಮಾರ್ಗದರ್ಶನ, ಪಕ್ಷದ ನಿರ್ಧಾರದಂತೆ ನಡೆದುಕೊಳ್ಳುತ್ತೇನೆ. ರಾಜ್ಯ ಬಿಜೆಪಿ ಉಪಾಧ್ಯಕ್ಷನಾಗಿ ರಾಜ್ಯಾದ್ಯಂತ ಪ್ರವಾಸ ಮಾಡುವುದು ನನ್ನ ಕರ್ತವ್ಯ. ಹಿಂದಿನಿಂದಲೂ ಅದನ್ನು ಮಾಡಿದ್ದೇನೆ, ಮುಂದೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ.
ಶಿಕಾರಿಪುರ ಸ್ಪರ್ಧೆ ಬಗ್ಗೆ ತಂದೆಯವರನ್ನು ಕೇಳುವ ಪ್ರಶ್ನೆಯೇ ಉದ್ಭವಿಸಿರಲಿಲ್ಲ. ಕ್ಷೇತ್ರ ಜನರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಒತ್ತಾಯ ಮಾಡಿದ್ದರು. ಆದ್ದರಿಂದ ಈ ಬಗ್ಗೆ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ನಿವೃತ್ತಿ ಎಂಬುವುದೇ ಇಲ್ಲ, ಏಕೆಂದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ವೇಳೆ ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡ್ತಾರೆ. ಅಧಿಕಾರಕ್ಕೆ ತರಲು ಶ್ರಮ ಹಾಕ್ತಾರೆ ಎಂದು ವಿಜಯೇಂದ್ರ ಹೇಳಿದ್ದಾರೆ.










