ಕೋಲ್ಕತ್ತಾ : ನಂದಿಗ್ರಾಮದ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ವೇಳೆ ಸಿಎಂ ಮಮತಾ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದ್ದು, ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ನಂದಿ ಗ್ರಾಮದಲ್ಲಿ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ನಡೆದ ಹಲ್ಲೆಯಿಂದಾಗಿ ಮಮತಾ ಬ್ಯಾನರ್ಜಿ ಅವರ ಎಡಗಾಲಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಎಸ್ಎಸ್ಕೆಎಂ ಆಸ್ಪತ್ರೆಯ ಡಾ.ಎಂ.ಬಂಡೋಪಾಧ್ಯಾಯ ಅವರು ಆರಂಭಿಕ ಪರೀಕ್ಷೆಯಲ್ಲಿ ಎಡಗಾಲು ಮತ್ತು ಪಾದದಲ್ಲಿ ತೀವ್ರ ಪೆಟ್ಟು ಬಿದ್ದಿದೆ. ಇದರ ಜೊತೆಗೆ ಭುಜ, ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ಎದೆ ನೋವು, ಉಸಿರಾಟದ ಸಮಸ್ಯೆ ಇರುವ ಬಗ್ಗೆ ಬ್ಯಾನರ್ಜಿ ಅವರು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು 48 ಗಂಟೆಗಳ ಕಾಲ ನಿಗಾವಹಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳ ಮೇಲೆ ಹಲ್ಲೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.










